ಹಾರೋಹಳ್ಳಿ: ಸರ್ಕಾರಿ ಸೌಲಭ್ಯ ರೈತರು, ಬಡವರಿಗೆ ತಲುಪಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕನಕಪುರ ನಗರಸಭೆ ಸಭಾಂಗಣದಲ್ಲಿ ಗುರುವಾರ ನಡೆದ ಹಾರೋಹಳ್ಳಿ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರಿ ಅಧಿಕಾರಿಗಳಿಗೆ ಸಂಬಳ ಸಿಗುತ್ತದೆ. ಆದರೆ, ರೈತರಿಗೆ ಯಾವುದೇ ಸಂಬಳ, ಉದ್ಯೋಗವಿಲ್ಲ ಎಂದರು.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿದಿದೆ. ಶಿಕ್ಷಣ ಇಲಾಖೆ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಶಿಕ್ಷಕರು ಆಸಕ್ತಿಯಿಂದ ಕೆಲಸ ಮಾಡುತ್ತಿಲ್ಲ. ಇದರಿಂದ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷನಾಗಿದ್ದಾಗ ರಾಮನಗರ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿತ್ತು. ಈಗ 27ನೇ ಸ್ಥಾನಕ್ಕೆ ಕುಸಿದಿದೆ. ಪಂಚಾಯಿತಿಗೊಂದು ಮಾದರಿ ಶಾಲೆ ನಿರ್ಮಾಣ ಮಾಡಲಾಗುತ್ತಿದೆ. ಶಿಕ್ಷಣ ಇಲಾಖೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದರು.
ಗ್ರಾಮ ಲೆಕ್ಕಾಧಿಕಾರಿಗೆ ತರಾಟೆ: ದೊಡ್ಡ ಮುದವಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಯಾರದ್ದೋ ಸ್ವತ್ತನ್ನು ಮತ್ತೊಬ್ಬರ ಹೆಸರಿಗೆ ಖಾತೆ ಮಾಡಲಾಗಿದೆ. ಎಷ್ಟೋ ಆಸ್ತಿಗಳಿಗೆ ನಕಲಿ ದಾಖಲೆ ಸೃಷ್ಟಿಯಾಗುತ್ತಿದೆ ಎಂದು ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್ ಅವರನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.
ಕೆಡಿಪಿ ಸದಸ್ಯ ಕೋಟೆ ಕುಮಾರ್ ಮಾತನಾಡಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಿರುದ್ಧ ಆರೋಪಗಳ ಸುರಿಮಳೆಗೈದರು. 2022ರಲ್ಲಿ ಆಶ್ರಯ ಯೋಜನೆಯಡಿ ಮಂಜೂರಾಗಿದ್ದ ದಾಖಲೆಗಳೇ ಮಾಯವಾಗಿವೆ. ಅದರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದರು.
ರಸ್ತೆ ವಿಸ್ತರಣೆ ವಿಚಾರವಾಗಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.
ತಹಶೀಲ್ದಾರ್ ಹರ್ಷವರ್ಧನ್,ಇಒ ಅವಿನಾಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು,ಗ್ರಾಮ ಪಂಚಾಯಿತಿ ಅಧಿಕಾರಿಗಳು ಉಪಸ್ಥಿತರಿದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.