ADVERTISEMENT

ಸಂಬಂಧಿಗಳು ಆಸ್ಪತ್ರೆಗೆ ಬರದಿರಿ: ರಾಮನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಪೊಲೀಸ್‌ ಭದ್ರತೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಷಾರ್ ಗಿರಿನಾಥ್ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಮೇ 2021, 3:02 IST
Last Updated 21 ಮೇ 2021, 3:02 IST
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಷಾರ್ ಗಿರಿನಾಥ್ ಮಾತನಾಡಿದರು
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಷಾರ್ ಗಿರಿನಾಥ್ ಮಾತನಾಡಿದರು   

ರಾಮನಗರ: ‘ಕೋವಿಡ್ ಸೋಂಕಿತರು ಆಸ್ಪತ್ರೆಗೆ ದಾಖಲಾದ ನಂತರ ಅವರ ಸಂಬಂಧಿಕರು ಯಾವುದೇ ಕಾರಣಕ್ಕೂ ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ಒಳಗೆ ಸೋಂಕಿತರನ್ನು ನೋಡಲು ಬರಬಾರದು. ಇದಕ್ಕೆ ಸೂಕ್ತ ಬಂದೋಬಸ್ತ್ ಮಾಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಷಾರ್ ಗಿರಿನಾಥ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಕೋವಿಡ್ ಸೋಂಕಿತರಿಗೆ ಆಸ್ಪತ್ರೆಯಲ್ಲಿ ಉತ್ತಮ ಆಹಾರ, ಅವಶ್ಯಕತೆ ಇರುವವರಿಗೆ ಆಮ್ಲಜನಕ ಹಾಗೂ ಔಷಧಿ ಒದಗಿಸಬೇಕು. ಸೋಂಕಿತರ ಸಂಬಂಧಿಕರು ಸೋಂಕಿತರ ಸಂಪರ್ಕಕ್ಕೆ ಬಂದರೆ ಸೋಂಕು ಹರಡುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿ ಆಸ್ಪತ್ರೆ ಹಾಗೂ ಕೋವಿಡ್ ಆರೈಕೆ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆ ಒದಗಿಸಿ ಎಂದು ಸಲಹೆ ನೀಡಿದರು.

ADVERTISEMENT

ಐ.ಎಲ್.ಐ, ಎಸ್.ಎ.ಆರ್.ಐ ಪ್ರಕರಣಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು. ಹೋಮ್ ಐಸೋಲೇಷನ್‌ನಲ್ಲಿರುವ ಸೋಂಕಿತರ ಆರೋಗ್ಯ ತಪಾಸಣೆ ನಡೆಯುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಿ. ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಬೇಕಿರುವ ಸೌಲಭ್ಯಗಳನ್ನು ಒದಗಿಸಬೇಕು. ಅದಕ್ಕೆ ಬೇಕಿರುವ ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು ಎಂದರು.

ಲಾಕ್‌ಡೌನ್ ನಿರಂತರವಾಗಿ ಇರುವುದಿಲ್ಲ. ಒಂದು ದಿನ ತೆರವು
ಗೊಳಿಸಲಾಗಲಿದೆ. ತೆರವುಗೊಳಿಸಿದ ನಂತರ ಅಂತರ ಕಾಯ್ದುಕೊಳ್ಳುವುದು ದೊಡ್ಡ ಸವಾಲು. ಇದಕ್ಕೆ ಮೊದಲೇ ಯೋಜನೆ ರೂಪಿಸಿಕೊಂಡು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಕೆ. ರಾಕೇಶ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ದಿನವೊಂದಕ್ಕೆ ಸರಾಸರಿ 450 ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ಹೋಮ್ ಐಸೋಲೇಷನ್‌ ರದ್ದುಗೊಳಿಸಿದ್ದು, ಅಂತಹವರಿಗೆ ಆರೈಕೆ ಕೇಂದ್ರಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ನೂತನ ಜಿಲ್ಲಾ ಆಸ್ಪತ್ರೆಯಲ್ಲಿ 150 ಆಮ್ಲಜನಕ ಸಹಿತ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿರಂಜನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.