ADVERTISEMENT

ಅಭಿವೃದ್ಧಿ ಕಾಮಗಾರಿಗೆ ₹ 150 ಕೋಟಿ ಬಿಡುಗಡೆ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2024, 15:40 IST
Last Updated 15 ಆಗಸ್ಟ್ 2024, 15:40 IST
ಚನ್ನಪಟ್ಟಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿದರು
ಚನ್ನಪಟ್ಟಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿದರು   

ಚನ್ನಪಟ್ಟಣ: ಚನ್ನಪಟ್ಟಣ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ₹ 150 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಗುರುವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿದರು.

ಮುಖ್ಯಮಂತ್ರಿಗಳು ಗುರುವಾರವಷ್ಟೆ ಚನ್ನಪಟ್ಟಣ ತಾಲ್ಲೂಕಿನ ಪಂಚಾಯಿತಿ ಮಟ್ಟದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ವಿಶೇಷ ಅನುದಾನ ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಈ ಅನುದಾನದಲ್ಲಿ ಆಗಬೇಕಾದ ಕಾಮಗಾರಿಗಳನ್ನು ರೂಪಿಸುವಂತೆಯೂ ಸೂಚಿಸಿದ್ದಾರೆ. ತಾಲ್ಲೂಕಿನ ಅರ್ಹ ಫಲಾನುಭವಿಗಳಿಗೆ ನೀಡಲು 5 ಸಾವಿರ ಮನೆಗಳು ಮಂಜೂರಾಗಿವೆ. ಈ ಮೂಲಕ ಚನ್ನಪಟ್ಟಣ ತಾಲ್ಲೂಕಿನಲ್ಲಿ ಹೊಸ ಬದಲಾವಣೆ ತರಲು ಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಚನ್ನಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಸ್ಪಂದನೆ ಸಭೆಗಳಲ್ಲಿ ಸಾರ್ವಜನಿಕರಿಂದ ಸಾವಿರಾರು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಗರಕಹಳ್ಳಿ ಏತನೀರಾವರಿ ಯೋಜನೆಯ ಪುನಶ್ಚೇತನ, ತಾಲ್ಲೂಕಿನಾದ್ಯಂತ ಚೆಕ್ ಡ್ಯಾಂಗಳು, ಸೇತುವೆಗಳ ನಿರ್ಮಾಣಕ್ಕೆ ₹ 115 ಕೋಟಿ ಮಂಜೂರಾಗಿದೆ. ಸತ್ತೇಗಾಲದಿಂದ ಇಗ್ಗಲೂರು ಮೂಲಕ ರಾಮನಗರ-ಚನ್ನಪಟ್ಟಣಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಜಲಸಂಪನ್ಮೂಲ ಇಲಾಖೆಯಿಂದ ಜವಾಬ್ದಾರಿ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾಡುಪ್ರಾಣಿಗಳ ಉಪಟಳದಿಂದ ರಕ್ಷಣೆಯ ಕಾರ್ಯಾಚರಣೆಗೆ ₹ 65 ಕೋಟಿ ಬಿಡುಗಡೆ ಮಾಡಲಾಗಿದೆ. ಆಶ್ರಯ ಮನೆ ಯೋಜನೆಯಡಿ ನಿವೇಶನಕ್ಕಾಗಿ 7 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದು, ನಿವೇಶನ ನೀಡಲು ಈಗಾಗಲೇ 117 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಒಟ್ಟಾರೆ 5 ಸಾವಿರ ನಿವೇಶನಗಳನ್ನು ಹಂಚಲು ತೀರ್ಮಾನಿಸಲಾಗಿದೆ ಎಂದರು.

ಅಂಬೇಡ್ಕರ್ ಅಭಿವೃದ್ದಿ ನಿಗಮ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಒಕ್ಕಲಿಗ, ವೀರಶೈವ ಸಮುದಾಯ ಸೇರಿದಂತೆ ವಿವಿಧ ಅಭಿವೃದ್ದಿ ನಿಗಮಗಳ ಹಲವು ಯೋಜನೆಗಳಡಿ ಬಡವರ ಕಲ್ಯಾಣಕ್ಕೆ ನೆರವು, ಸಾಲಸೌಲಭ್ಯ, ಸಹಾಯಧನದ ಯೋಜನೆಗಳನ್ನು ನೀಡಲಾಗುತ್ತದೆ. ಅರ್ಹರು ಅವುಗಳ ಪ್ರಯೋಜನ ಪಡೆಯಬೇಕು ಎಂದರು.

ಚನ್ನಪಟ್ಟಣದಲ್ಲಿ ಧ್ವಜ ಹಾರಿಸಲು ಜನಪ್ರತಿನಿಧಿ ಇಲ್ಲದ ಕಾರಣ, ನಿಮ್ಮ ಮನೆ ಮಗನಾಗಿ ನಾನು ಇಲ್ಲಿಗೆ ಬಂದಿದ್ದೇನೆ. ನಿಮ್ಮನ್ನು ಬಿಟ್ಟು ಹೋಗುವ ಪ್ರಶ್ನೆ ಇಲ್ಲ. ರಾಜಕೀಯ ಮಾಡುವುದಕ್ಕಿಂತ ಹೇಗೆ ಅಭಿವೃದ್ಧಿ ಮಾಡಬಹುದು ಎಂದು ತೋರಿಸಲು ಇಲ್ಲಿಗೆ ಬಂದಿದ್ದೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.