
ರಾಮನಗರ: ‘ಜಿಲ್ಲಾಡಳಿತದ ವತಿಯಿಂದ ಜ. 26ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅವರು ಧ್ವಜಾರೋಹಣ ನೆರವೇರಿಸುವರು ಎಂದರು.
ಪಥಸಂಚಲನ ಶಿಸ್ತುಬದ್ಧವಾಗಿ ಉತ್ತಮ ರೀತಿಯಲ್ಲಿ ನಡೆಯಲು ತಾಲೀಮು ನಡೆಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು ವಿಭಿನ್ನವಾಗಿ ಆಕರ್ಷಿತವಾಗಿರಬೇಕು. ಪೊಲೀಸ್ ಅಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಈ ದಿಸೆಯಲ್ಲಿ ಕ್ರಮ ಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಧ್ವಜ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮಾರಾಟ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಧ್ವಜ ಮಾರಾಟ ಕಂಡುಬಂದಲ್ಲಿ ವಶಪಡಿಸಿಕೊಂಡು, ಮಾರಾಟಗಾರರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಗಣರಾಜ್ಯೋತ್ಸವ ಆಚರಿಸಿ ಕಡ್ಡಾಯವಾಗಿ ಕ್ರೀಡಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭಾಗವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಾತಿ ಪಡೆದು ವಿವರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು ಎಂದು ಸೂಚಿಸಿದರು.
‘ಆಹ್ವಾನ ಪತ್ರಿಕೆ ಮುದ್ರಣ ಹಾಗೂ ಶಿಷ್ಟಾಚಾರದಂತೆ ಹಂಚಿಕೆ ಮಾಡುವುದು ಮತ್ತು ಕ್ರೀಡಾಂಗಣದಲ್ಲಿ ಸ್ವಚ್ಛತೆ ಕಾಪಾಡುವ ಕೆಲಸವನ್ನು ಸಂಬಂಧಿಸಿದ ಇಲಾಖೆಗಳು ನಿರ್ವಹಿಸಬೇಕು. ಕ್ರೀಡಾಂಗಣದಲ್ಲಿ ಆಂಬುಲೆನ್ಸ್, ವೈದ್ಯರು ಹಾಗೂ ಅಗ್ನಿಶಾಮಕ ದಳದವರು ಇರಬೇಕು ಎಂದು ತಿಳಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.