
ಚನ್ನಪಟ್ಟಣ: ಚನ್ನಾಂಬಿಕ ಸಮೂಹ ಶಿಕ್ಷಣ ಸಂಸ್ಥೆಗಳಿಂದ ತಾಲ್ಲೂಕಿನ ಯಲಚಿಪಾಳ್ಯದ ಆಕ್ಸ್‌ಫರ್ಡ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶನಿವಾರ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ಶಿಕ್ಷಣ ಇಲಾಖೆ (ಪ್ರೌಢಶಾಲೆ) ಜಿಲ್ಲಾ ಉಪನಿರ್ದೇಶಕ ಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ವಸ್ತು ಪ್ರದರ್ಶನಗಳಂತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ವೈಜ್ಞಾನಿಕ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಹೊಸಹೊಸ ವೈಜ್ಞಾನಿಕ ಸಂಶೋಧನೆಗಳನ್ನು ಮಾಡುವತ್ತ ಗಮನಹರಿಸಬೇಕು ಎಂದರು.
ವಿಧಾನ ಪರಿಷತ್ತಿನ ಸದಸ್ಯ ಪುಟ್ಟಣ್ಣ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸುವುದರ ಜೊತೆಗೆ ಪೋಷಕರಿಗೆ ಸದಾ ಚಿರಋಣಿಯಾಗಿರಬೇಕು. ಶಿಕ್ಷಣದಲ್ಲಿ ಪ್ರಗತಿ ಸಾಧಿಸಬೇಕು. ವಿದ್ಯಾರ್ಥಿಗಳ ಏಳಿಗೆಗೆ ಶ್ರಮಿಸಲು ಸದಾ ಸಿದ್ಧನಾಗಬೇಕು. ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವುದರ ಜೊತೆಗೆ ಶಿಕ್ಷಣ ವ್ಯವಸ್ಥೆ ಬಲಪಡಿಸಲು ಶ್ರಮಿಸುವುದಾಗಿ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗಯ್ಯ, ಬಿಆರ್‌ಸಿ ಸಿ.ರಾಜಶೇಖರ್, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಪೂರ್ಣಿಮಾ ನಿಂಗೇಗೌಡ, ವ್ಯವಸ್ಥಾಪಕ ನಿರ್ದೇಶಕ ಚೇತನ್ ಎನ್.ಗೌಡ, ಪ್ರಾಂಶುಪಾಲರು, ಮುಖ್ಯಶಿಕ್ಷಕರು, ಉಪನ್ಯಾಸಕರು, ಶಿಕ್ಷಕರು, ಬೋಧಕೇತರ ಸಿಬ್ಬಂದಿ, ಪ್ರಾಂಶುಪಾಲರು, ಮುಖ್ಯಶಿಕ್ಷಕರು, ಶಿಕ್ಷಕರು ಭಾಗವಹಿಸಿದ್ದರು.
ವಿದ್ಯಾರ್ಥಿಗಳು ವಿಜ್ಞಾನ, ಸಮಾಜ ವಿಜ್ಞಾನದ ಮಾದರಿಗಳನ್ನು ಪ್ರದರ್ಶಿಸಿದರು. ದೃಷ್ಟಿ ಕಣ್ಣಿನ ಆಸ್ಪತ್ರೆ ಮತ್ತು ಸಾಯಿ ಆಸ್ಪತ್ರೆ ಸಹಯೋಗದೊಂದಿಗೆ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.