ರಾಮನಗರ: ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‍ನ ರಾಮನಗರ ಜಿಲ್ಲಾ ಘಟಕದ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಭಾನುವಾರ ಛತ್ರಪತಿ ಶಿವಾಜಿ ಮಹಾರಾಜರ 398ನೇ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9 ಗಂಟೆಗೆ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಎಂ.ಜಿ. ರಸ್ತೆ, ಮುಖ್ಯ ರಸ್ತೆಯ ಮೂಲಕ ಅಂಬೇಡ್ಕರ್ ಭವನದವರೆಗೆ ಶಿವಾಜಿ ಮಹಾರಾಜರ ಚಿತ್ರದ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಬೆಂಗಳೂರಿನ ಗವಿಪುರಂನಲ್ಲಿರುವ ಗೋಸಾಯಿ ಮಹಾ ಸಂಸ್ಥಾನದ ಮಂಜುನಾಥ ಸ್ವಾಮೀಜಿ ವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ. ಸಿ.ಎನ್. ಮಂಜುನಾಥ್, ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್, ಮಾಜಿ ಗೃಹ ಸಚಿವ ಪಿ.ಜಿ.ಆರ್. ಸಿಂಧ್ಯ, ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮರಾಠ ಪರಿಷತ್ ರಾಜ್ಯಾಧ್ಯಕ್ಷ ಎಸ್. ಸುರೇಶ್ ರಾವ್ ಸಾಠೆ ಅಧ್ಯಕ್ಷತೆ ವಹಿಸಲಿದ್ದಾರೆ.
ತುಮಕೂರಿನ ಸಹಾಯಕ ಪ್ರಾಧ್ಯಾಪಕ ಮಂಜುನಾಥ್ ಅವರು ಶಿವಾಜಿ ಕುರಿತು ಉಪನ್ಯಾಸ ನೀಡಲಿದ್ದಾರೆ. ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಹಾಗೂ ರಾಮನಗರ ಜಿಲ್ಲಾ ಕ್ಷತ್ರಿಯ ಮರಾಠ ಸೇವಾ ಟ್ರಸ್ಟ್ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ರಾಮನಗರ ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆಗಳು ಸಹಕಾರ ನೀಡಿವೆ.
ಶಿವಾಜಿ ಜಯಂತಿಯ ಜೊತೆಗೆ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್‍ನ 50ನೇ ವರ್ಷದ ಸುವರ್ಣ ಮಹೋತ್ಸವವನ್ನು ಆಚರಿಸಲಾಗುತ್ತಿದೆ ಎಂದು ಮರಾಠ ಪರಿಷತ್‍ನ ರಾಮನಗರ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ರಾವ್ ಕಾಂಬ್ಳೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.