ಡಾ. ಶೈಲೇಶ್ ಕಾಕೋಳು
ರಾಮನಗರ: ಚುಟುಕು ಸಾಹಿತ್ಯ ಪರಿಷತ್ತು ಹಾಗೂ ಕಮತಗಿಯ ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘದ ಸಹಯೋಗದಲ್ಲಿ ಶನಿವಾರ ನಗರದ ನ್ಯೂ ಎಕ್ಸ್‌ಪರ್ಟ್ ಕಾಲೇಜು ಸಭಾಂಗಣದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ದ್ವಿತೀಯ ಚುಟುಕು ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.
ಸಾಹಿತಿ, ಕಲಾವಿದ ಹಾಗೂ ಪೊಲೀಸ್ ಅಧಿಕಾರಿ ಡಾ. ಶೈಲೇಶ್ ಕಾಕೋಳು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಸಮ್ಮೇಳನಾಧ್ಯಕ್ಷರು ಹಾಗೂ 120 ಮೀ. ಉದ್ದದ ಕನ್ನಡ ಧ್ವಜದ ಮೆರವಣಿಗೆಗೆ ಬೆಳಿಗ್ಗೆ 9 ಗಂಟೆಗೆ ಐಜೂರಿನ ಮಲ್ಲೇಶ್ವರ ದೇವಸ್ಥಾನದಲ್ಲಿ ಎನ್.ಎಚ್. ಕನಸು ಅಕಾಡೆಮಿಯ ನವೀನ್ ಕುಮಾರ್ ಮತ್ತು ವಕೀಲ ಎಸ್. ನಾಗರಾಜು ಚಾಲನೆ ನೀಡಲಿದ್ದಾರೆ.
ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಅವರು ಸಮ್ಮೇಳನದ ಧ್ವಜಾರೋಹಣ ಮಾಡಲಿದ್ದಾರೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಗುರುವಿನಪುರದ ಬೃಹನ್ಮಠದ ಜಗದೀಶ ಶಿವಾಚಾರ್ಯ ಸ್ವಾಮೀಜಿ, ನಿರಂಜನ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. ಸಂಘದ ಅಧ್ಯಕ್ಷ ರಮೇಶ ಕಮತಗಿ ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ. ಪರಿಷತ್ತಿನ ಜಿಲ್ಲಾಧ್ಯಕ್ಷ ಅಂಬರೀಷ್ ಆಶಯ ನುಡಿಗಳನ್ನಾಡಲಿದ್ದಾರೆ.
ಕಾರ್ಯಕ್ರಮವನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ. ರಾಜು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಎಂ.ಜಿ.ಆರ್. ಅರಸು ವಹಿಸಲಿದ್ದು, ಮೈಸೂರು ಘಟಕದ ಅಧ್ಯಕ್ಷೆ ರತ್ನಾ ಹಾಲಪ್ಪಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಕೀಲ ಎಸ್. ಗೋಪಾಲಗೌಡ ಅವರು ‘ಮುತ್ತಿನ ಮುಕುಟಮಣಿ’ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಸಾಹಿತಿ ಕೂ.ಗಿ. ಗಿರಿಯಪ್ಪ ಅವರು ವಿಚಾರಗೋಷ್ಠಿ ಮತ್ತು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಕವಿಗಳು ವಿಚಾರ ಮಂಡಿಸಿ, ಕವಿತೆ ವಾಚಿಸಲಿದ್ದಾರೆ. ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷ ಅಂಬರೀಷ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.