ADVERTISEMENT

ರಾಮನಗರ | ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೊದಲ ದಿನ 149 ಮಂದಿ ಗೈರು

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2024, 5:20 IST
Last Updated 26 ಮಾರ್ಚ್ 2024, 5:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮನಗರ: ರಾಜ್ಯದಾದ್ಯಂತ ಸೋಮವಾರ ಶುರುವಾದ ಎಸ್ಎಸ್‌ಎಲ್‌ಸಿ ಪರೀಕ್ಷೆ ಜಿಲ್ಲೆಯಲ್ಲಿ ಸರಾಗವಾಗಿ ನಡೆದಿದೆ. ಸೋಮವಾರ ನಡೆದ ಪ್ರಥಮ ಭಾಷೆಯ ಪರೀಕ್ಷೆಗೆ 12,841 ವಿದ್ಯಾರ್ಥಿಗಳು ಹಾಜರಾಗಿದ್ದು, 149 ಮಂದಿ ಗೈರು ಹಾಜರಾದರು. ಪರೀಕ್ಷೆ ವೇಳೆ ಯಾವುದೇ ಅಕ್ರಮ ಹಾಗೂ ಅಹಿಕತರ ಘಟನೆಗಳು ವರದಿಯಾಗಿಲ್ಲ.

ಮೊದಲ ದಿನವಾಗಿದ್ದರಿಂದ ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ದಟ್ಟಣೆ ಕಂಡುಬಂತು. ಪರೀಕ್ಷೆಗೆ ಶುರುವಾಗುವುದಕ್ಕೆ ಒಂದು ತಾಸು ಮುಂಚೆಯೇ ಕೇಂದ್ರಗಳತ್ತ ಜಮಾಯಿಸಿದ್ದ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಕೊಠಡಿ ಸಂಖ್ಯೆಯನ್ನು ಪರಿಶೀಲಿಸಿಕೊಂಡರು. ಕೇಂದ್ರದ ಬಳಿಯೇ ಕಡೆ ಕ್ಷಣದ ತಯಾರಿ ನಡೆಸಿ ಪರೀಕ್ಷೆಗೆ ಹಾಜರಾದರು.

ಪರೀಕ್ಷಾ ಅಕ್ರಮಕ್ಕೆ ಅವಕಾಶ ನೀಡದಂತೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದ ಶಾಲಾ ಶಿಕ್ಷಣ ಇಲಾಖೆಯು, ಸುಮಾರು 362 ಪರೀಕ್ಷಾ ಕೊಠಡಿಗಳಿಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿತ್ತು. ವಿದ್ಯಾರ್ಥಿಗಳು ಕ್ಯಾಮೆರಾ ನಿಗಾದಲ್ಲಿ ಪರೀಕ್ಷೆ ಬರೆದರು. ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ನಿಯಂತ್ರಣ ಕೊಠಡಿ ಸಹ ತೆರೆಯಲಾಗಿತ್ತು.

ADVERTISEMENT

ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು, ಸೈಬರ್‌ ಹಾಗೂ ಕಂಪ್ಯೂಟರ್ ಕೇಂದ್ರಗಳನ್ನು ಬಂದ್ ಮಾಡಿಸಲಾಗಿತ್ತು. ಕೇಂದ್ರಗಳ ಬಳಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ, ಅಕ್ರಮವಾಗಿ ಪ್ರವೇಶಿಸುವವರ ಮೇಲೆ ನಿಗಾ ವಹಿಸಲಾಗಿತ್ತು. ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾದರೆ ತಕ್ಷಣ ಸ್ಪಂದಿಸುವುದಕ್ಕಾಗಿ ತಾಲ್ಲೂಕಿಗೆ ಒಂದರಂತೆ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

ಇಲಾಖೆಯ ಉಪ ನಿರ್ದೇಶಕ ಪುರುಷೋತ್ತಮ್ ಹಾಗೂ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.