ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧತೆ (ಪ್ರಾತಿನಿಧಿಕ ಚಿತ್ರ)
ರಾಮನಗರ: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3 ಆಗಸ್ಟ್ 2ರಿಂದ 8ರವರೆಗೆ ನಡೆಯಲಿದೆ. ಜಿಲ್ಲೆಯ 7 ಕೇಂದ್ರಗಳಲ್ಲಿ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಜರುಗಲಿರುವ ಪರೀಕ್ಷೆಗೆ 1,817 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯು ಪರೀಕ್ಷೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.
ರಾಮನಗರದ 2, ಚನ್ನಪಟ್ಟಣದಲ್ಲಿ 2, ಕನಕಪುರದಲ್ಲಿ 2 ಹಾಗೂ ಮಾಗಡಿಯಲ್ಲಿ 1 ಕೇಂದ್ರಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಎದುರಿಸಲಿರುವ ಒಟ್ಟು 1,817 ವಿದ್ಯಾರ್ಥಿಗಳಲ್ಲಿ ರಾಮನಗರದ 520, ಚನ್ನಪಟ್ಟಣದ 473, ಕನಕಪುರದ 568 ಹಾಗೂ ಮಾಗಡಿಯ 256 ವಿದ್ಯಾರ್ಥಿಗಳಿದ್ದಾರೆ. ಕನಕಪುರದಲ್ಲಿ ಹೆಚ್ಚು ಹಾಗೂ ಮಾಗಡಿಯಲ್ಲಿ ಅತಿ ಕಡಿಮೆ ಮಕ್ಕಳಿದ್ದಾರೆ.
‘ಪ್ರಸ್ತುತ ಸಾಲಿನಲ್ಲಿ ಖಾಸಗಿ ಪರೀಕ್ಷಾ ಕೇಂದ್ರಗಳಿರುವುದಿಲ್ಲ. ಖಾಸಗಿ ನೋಂದಾಯಿತ ಅಭ್ಯರ್ಥಿಗಳು ಕೂಡ ಸಾಮಾನ್ಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದು, ಅದಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೇಂದ್ರದಲ್ಲಿ ಶೌಚಾಲಯ, ಕೊಠಡಿಗೆ ಗಾಳಿ ಬೆಳಕಿನ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ’ ಎಂದು ಇಲಾಖೆಯ ಉಪ ನಿರ್ದೇಶಕ ವಿ.ಸಿ. ಬಸವರಾಜೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಿಳಿಸಿದ್ದಾರೆ.
‘ಜಿಲ್ಲಾ ಮಟ್ಟದಲ್ಲಿ ಉಪ ನಿರ್ದೇಶಕರು (ಆಡಳಿತ) ಮತ್ತು ಡಯಟ್ ಪ್ರಾಂಶುಪಾಲರ ನೇತೃತ್ವದಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಹಂತದಲ್ಲಿ ವಿಚಕ್ಷಣಾ ದಳ ರಚಿಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಲು ಕ್ರಮ ವಹಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಒಬ್ಬರಂತೆ ಸ್ಥಾನಿಕ ಜಾಗೃತ ದಳದ ಸದಸ್ಯರನ್ನು ರೊಟೇಷನ್ ಆಧಾರದಲ್ಲಿ ನೇಮಿಸಲಾಗಿದೆ’ ಎಂದಿದ್ದಾರೆ.
‘ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಮುಖ್ಯ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು, ಕಸ್ಟೋಡಿಯನ್, ಜಾಗೃತ ದಳ, ಮೊಬೈಲ್ ಕಸ್ಟೋಡಿಯನ್ ಹಾಗೂ ಸಿಬ್ಬಂದಿಗೆ ಉಪ ನಿರ್ದೇಶಕರ/ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ತರಬೇತಿ ನೀಡಲಾಗಿದೆ. ಕೇಂದ್ರದಲ್ಲಿ ಒಂದು ಕೊಠಡಿಗೆ ಗರಿಷ್ಠ 24 ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.
‘ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಪ್ರತಿ ತಾಲ್ಲೂಕಿಗೆ ಒಂದು ಆಂಬ್ಯುಲೆನ್ಸ್ ಕಾಯ್ದಿರಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಕೇಂದ್ರ ತೆರೆದು ಇಬ್ಬರು ಆರೋಗ್ಯ ಕಾರ್ಯಕರ್ತರನ್ನು ಹಾಗೂ ಭದ್ರತೆಗಾಗಿ ಪ್ರತಿ ಕೇಂದ್ರಕ್ಕೆ ಇಬ್ಬರು ಪೊಲೀಸರನ್ನು ನಿಯೋಜಿಸಲಾಗುವುದು. ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸುವಂತೆ ಹಾಗೂ ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಕೇಂದ್ರಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.