ADVERTISEMENT

ಬಾಲ ಕಾರ್ಮಿಕ ಪದ್ದತಿ ತಡೆಗೆ ಟಾಸ್ಕ್‌ ಫೋರ್ಸ್: ಡಿ.ಸಿ

ಬಾಲ ಕಾರ್ಮಿಕ ನಿರ್ಮೂಲನೆ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2023, 16:09 IST
Last Updated 2 ಜೂನ್ 2023, 16:09 IST

ರಾಮನಗರ: ‘ಜಿಲ್ಲೆಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಪತ್ತೆ ಮಾಡಿ ಪುರ್ನವಸತಿ ಕಲ್ಪಿಸಲು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್‌ ಫೋರ್ಸ್ ಸಮಿತಿಗಳನ್ನು ರಚಿಸಲಾಗಿದೆ. ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ 3 ತಿಂಗಳಿಗೊಮ್ಮೆ ಸಮಿತಿ ಕಡ್ಡಾಯವಾಗಿ ಸಭೆ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನೆ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಬಾಲ ಕಾರ್ಮಿಕರ ರಕ್ಷಣೆಗಾಗಿ ಜಿಲ್ಲೆಯಾದ್ಯಂತ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಾಗಿ ನಡೆಸಬೇಕು. ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನವರನ್ನು ಅಪಾಯಕಾರಿ ಕ್ಷೇತ್ರಗಳಲ್ಲಿ ದುಡಿಸಿಕೊಳ್ಳುವಂತಿಲ್ಲ’ ಎಂದರು.

ADVERTISEMENT

‘ಕಾನೂನು ಉಲ್ಲಂಘಿಸಿದರೆ ಕನಿಷ್ಠ 6 ತಿಂಗಳಿಂದ ಗರಿಷ್ಠ 2 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ₹20 ಸಾವಿರದಿಂದ ₹50 ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಬಾಲ ಕಾರ್ಮಿಕ ಪದ್ಧತಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು’ ಎಂದು ಹೇಳಿದರು.

‘ಬಾಲ ಕಾರ್ಮಿಕ ಪದ್ಧತಿ ಹಾಗೂ ಆ ಕುರಿತು ಇರುವ ಕಾನೂನಿನ ಅರಿವು- ನೆರವು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆಟೊ ಪ್ರಚಾರ, ಬೀದಿ ನಾಟಕ, ಗೋಡೆ ಬರಹದ ಜೊತೆಗೆ ಕರಪತ್ರ ಮತ್ತು ಭಿತ್ತಿ ಚಿತ್ರಗಳನ್ನು ಹಂಚಿ ಜಾಗೃತಿ ಮೂಡಿಸಬೇಕು’ ಎಂದು ಸಲಹೆನೀಡಿದರು.

‘ಸಾರ್ವಜನಿಕರು ಸಹ ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಯಾರಾದರೂ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ– 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ– 112 ಸಂಖ್ಯೆಗೆ ಕರೆ ಮಾಡಿ ಮಕ್ಕಳ ರಕ್ಷಣೆಗೆ ಸಹಕಾರ ನೀಡಬೇಕು’ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಸುಭಾಷ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾರಾಯಣ ಸ್ವಾಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.