ADVERTISEMENT

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ರಾಮನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2024, 6:23 IST
Last Updated 29 ಜುಲೈ 2024, 6:23 IST
ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡಿಗಾಸು ನೀಡದೆ ಅನುದಾನ ನೀಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ, ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಶಾಸಕ ಎಚ್‌.ಎ. ಇಕ್ಬಾಲ್ ಹುಸೇನ್ ಸೇರಿದಂತೆ ಪಕ್ಷದ ಮುಖಂಡರು ಇದ್ದಾರೆ
ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡಿಗಾಸು ನೀಡದೆ ಅನುದಾನ ನೀಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ, ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಶಾಸಕ ಎಚ್‌.ಎ. ಇಕ್ಬಾಲ್ ಹುಸೇನ್ ಸೇರಿದಂತೆ ಪಕ್ಷದ ಮುಖಂಡರು ಇದ್ದಾರೆ   

ರಾಮನಗರ: ಕೇಂದ್ರ ಸರ್ಕಾರವು ಇತ್ತೀಚೆಗೆ ಮಂಡಿಸಿದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡಿಗಾಸು ನೀಡದೆ ಅನುದಾನ ನೀಡದೆ ಅನ್ಯಾಯ ಮಾಡಿದ್ದು, ಅಧಿಕಾರ ಉಳಿಸಿಕೊಳ್ಳಲು ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಮಾತ್ರ ಹೆಚ್ಚಿನ ಅನುದಾನ ನೀಡಿದೆ ಎಂದು ಆರೋಪಿಸಿ, ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಐಜೂರು ವೃತ್ತದಲ್ಲಿ ಬೆಳಿಗ್ಗೆ ಜಮಾಯಿಸಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಘೋಷಣೆ ಕೂಗಿದರು. ಸರ್ಕಾರ ಮಲತಾಯಿ ಧೋರಣೆ ಅನುಸರಿಸುವ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ಅನುದಾನ ಸಿಗದಿದ್ದರೂ, ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಮತ್ತು ಜೆಡಿಎಸ್ ಸಂಸದರು ಹಾಗೂ ಐವರು ಕೇಂದ್ರ ಸಚಿವರು ತುಟಿ ಬಿಚ್ಚಿಲ್ಲ. ರಾಜ್ಯದ ನೀರಾವರಿ ಯೋಜನೆಗಳು, ರಸ್ತೆ, ರೈಲ್ವೆ ಸೇರಿದಂತೆ ಇತರ ಕ್ಷೇತ್ರಗಳಿಗೆ ಯಾವುದೇ ಅನುದಾನ ತರುವಲ್ಲಿ ಸಂಸದರು ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು.

ADVERTISEMENT

ಕೇಂದ್ರ ಸರ್ಕಾರದ ಬಜೆಟ್‌ಗೂ ಮುಂಚೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು, ಬಿಜೆಪಿ ಸಂಸದರೊಂದಿಗೆ ಸಭೆ ನಡೆಸಿದ್ದರು. ರಾಜ್ಯದ ಸಮಸ್ಯೆಗಳನ್ನು ಕೇಂದ್ರದ ಗಮನಕ್ಕೆ ತರುವ ಜೊತೆಗೆ, ಅನುದಾನ ತರಲು ಪ್ರಯತ್ನಿಸುವಂತೆ ಸಲಹೆ ನೀಡಿದ್ದರು. ಆದರೆ, ಸಂಸದರು ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದರು ಹೇಳಿದರು.

ರಾಜ್ಯದ ಮಹತ್ವಕಾಂಕ್ಷಿ ಮೇಕೆದಾಟು ನೀರಾವರಿ ಯೋಜನೆ, ಭದ್ರಾ ಮೇಲ್ಡಂಡೆ ಸೇರಿದಂತೆ ಹಲವು ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಸಿಗಲಿದೆ ಎಂದು ನಾಡಿನ ಜನರು ಇಟ್ಟುಕೊಂಡಿದ್ದ ನಿರೀಕ್ಷೆ ಹುಸಿಯಾಗಿದೆ. ಬಜೆಟ್‌ನಲ್ಲಿ ಕೇಂದ್ರ ಸರ್ಕಾರದ ಪಕ್ಷಪಾತ ಧೋರಣೆ ಎದ್ದು ಕಾಣುತ್ತದೆ. ಈ ಸರ್ಕಾರ ಬಡವರು ಮತ್ತು ರೈತರ ವಿರೋಧಿ ನೀತಿಗಳನ್ನು ಅನುಸರಿಸುವ ಮೂಲಕ ಉಳ್ಳವರ ಪರವಾಗಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಆಕ್ರೊಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಶಾಸಕ ಎಚ್ಎ ಇಕ್ಬಾಲ್ ಹುಸೇನ್ , ಮಾಜಿ ಶಾಸಕರಾದ ಕೆ. ರಾಜು, ಎಂ.ಸಿ. ಅಶ್ವಥ್ , ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್, ಮಾಜಿ ಅಧ್ಯಕ್ಷ ಸಿ.ಎನ್ .ಆರ್. ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ದೀಪಾ ಮುನಿರಾಜು, ನಗರಸಭೆ ಸದಸ್ಯರಾದ ಪಾರ್ವತಮ್ಮ, ಆಯೇಷಾ, ಮುಖಂಡರಾದ ನರಸಿಂಹಯ್ಯ, ರಾಜಶೇಖರ್, ಜಗದೀಶ್ , ವಿ.ಎಚ್. ರಾಜು, ಸಮದ್, ಪರ್ವೇಜ್ ಪಾಷ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.