ADVERTISEMENT

ಕಾಲ್ತುಳಿತ ಪ್ರಕರಣ | ಕುಟುಂಬಕ್ಕೆ ತಲಾ ₹5 ಕೋಟಿ ಪರಿಹಾರ ಕೊಡಿ: ವಾಟಾಳ್ ನಾಗರಾಜ್

​ಪ್ರಜಾವಾಣಿ ವಾರ್ತೆ
Published 14 ಜೂನ್ 2025, 13:50 IST
Last Updated 14 ಜೂನ್ 2025, 13:50 IST
ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಖಂಡಿಸಿ ರಾಮನಗರದ ಐಜೂರು ವೃತ್ತದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರುನಾಡ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಖಂಡಿಸಿ ರಾಮನಗರದ ಐಜೂರು ವೃತ್ತದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರುನಾಡ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ರಾಮನಗರ: ಐಪಿಎಲ್ ಟ್ರೋಫಿ ಜಯಿಸಿದ ಬೆಂಗಳೂರು ರಾಯಲ್ ಚಾಲೆಂಜರ್ಸ್ (ಆರ್‌ಸಿಬಿ) ತಂಡದ ವಿಜಯೋತ್ಸವದ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಕ್ರಿಕೆಟ್ ಅಭಿಮಾನಿಗಳ ಕುಟುಂಬಕ್ಕೆ ತಲಾ ₹5 ಕೋಟಿ ಪರಿಹಾರ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದರು.

ಕಾಲ್ತುಳಿತ ಖಂಡಿಸಿ ನಗರದ ಐಜೂರು ವೃತ್ತದಲ್ಲಿ ಶುಕ್ರವಾರ ಕರುನಾಡ ಸೇನೆಯೊಂದಿಗೆ ಪ್ರತಿಭಟನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಕರ್ನಾಟಕ ರಾಜ್ಯ ಕ್ರಿಕೆಟ್ ನಿಯಂತ್ರಣ ಮಂಡಳಿ, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಹಾಗೂ ಆರ್‌ಸಿಬಿ ಸೇರಿ ಪರಿಹಾರ ನೀಡಬೇಕು ಎಂದರು.

ರಾಜ್ಯ ಸರ್ಕಾರದ ಆತುರದ ನಿರ್ಧಾರ ಹಾಗೂ ಸುರಕ್ಷತಾ ನಿರ್ಲಕ್ಷ್ಯವೇ ಕಾಲ್ತುಳಿತಕ್ಕೆ ಕಾರಣ. ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿಲ್ಲ. ಕೇವಲ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಕೆಲಸ ಮಾಡಿದ್ದಾರೆ. ದುರಂತಕ್ಕೆ ಸಂಬಂಧಿಸಿದಂತೆ ಕನಿಷ್ಠ ಇಬ್ಬರು ಸಚಿವರಿಂದ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.

ADVERTISEMENT

₹10 ಕೋಟಿ ಪರಿಹಾರಕ್ಕೆ ಆಗ್ರಹ: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನವು ದೇಶ ಕಂಡ ಅತಿ ದೊಡ್ಡ ದುರಂತಗಳಲ್ಲಿ ಒಂದಾಗಿದೆ. ದುರ್ಘಟನೆಯಲ್ಲಿ ಮೃತಪಟ್ಟವರಿಗೆ ₹1 ಕೋಟಿ ಪರಿಹಾರದ ಬದಲು ತಲಾ ₹10 ಕೋಟಿ ನೀಡಬೇಕು. ಇದರಿಂದ ನಷ್ಟಕ್ಕೆ ಒಳಗಾಗಿರುವ ಕುಟುಂಬದವರಿಗೆ ಆರ್ಥಿಕ ಭದ್ರತೆ ಸಿಗಲಿದೆ. ಅಲ್ಲದೆ, ದುರಂತದ ಕುರಿತು ಕೇಂದ್ರ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದರು.

ಪ್ರತಿಭಟನೆಯಲ್ಲಿ ಕರುನಾಡ ಸೇನೆ ರಾಜ್ಯ ಉಪಾಧ್ಯಕ್ಷ ಜಗದೀಶ್, ಮುಖಂಡರಾದ ಸಿ.ಎಸ್. ಜಯಕುಮಾರ್, ಆರ್,ಜೆ ಅರ್ಜುನ್, ಮಹೇಂದ್ರಮ್ಮ, ಜಯರಾಮ, ಕೃಷ್ಣಮೂರ್ತಿ, ಗಂಗಾಧರ್ ವಿ.ಎನ್, ಮಂಜುನಾಥ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.