ರಾಮನಗರದ ವಿಜಯನಗರದ ಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ಬುಧವಾರ ಜರುಗಿದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಸಮುದಾಯದ ಸಾಧಕರನ್ನು ಗಣ್ಯರು ಸನ್ಮಾನಿಸಲಾಯಿತು.
ರಾಮನಗರ: ‘ವಿಶ್ವಕರ್ಮ ಸಮುದಾಯವು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಈ ಸಮುದಾಯಕ್ಕೆ ಎಲ್ಲಾ ಕ್ಷೇತ್ರಗಳಲ್ಲೂ ಪ್ರಾತಿನಿಧ್ಯ ದೊರಕಿಸಿ ಕೊಡಲು ಸರ್ಕಾರ ಅಗತ್ಯ ಕ್ರಮ ವಹಿಸುತ್ತಿದೆ. ಜಿಲ್ಲಾ ಕೇಂದ್ರದಲ್ಲಿ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡಲಾಗುವುದು’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಭರವಸೆ ನೀಡಿದರು.
ಇಲ್ಲಿನ ವಿಜಯನಗರದ ಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವಿಜಯನಗರದ ಕಾಳಿಕಾಂಭ ದೇವಸ್ಥಾನದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು’ ಎಂದರು.
‘ರಾಜ್ಯ ಸರ್ಕಾರವು ಸಾಮಾಜಿಕ ನ್ಯಾಯ ತತ್ವದಡಿ ಆಡಳಿತ ನಡೆಸುತ್ತಿದೆ. ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳೇ ಸಾಕ್ಷಿ. ಎಲ್ಲಾ ಜಾತಿ ಮತ್ತು ಧರ್ಮದವರಿಗೂ ಈ ಯೋಜನೆಗಳು ತಲುಪುತ್ತಿವೆ. ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಎಲ್ಲಾ ಸಮುದಾಯಗಳ ಪ್ರಗತಿ ಸಾಧ್ಯ’ ಎಂದು ಹೇಳಿದರು.
ಸಂಸದ ಡಾ. ಸಿ.ಎನ್. ಮಂಜುನಾಥ್ ಮಾತನಾಡಿ, ‘ಶ್ರಮಿಕರಿಗೆ ಆಸರೆಯಾಗಲು ಕೇಂದ್ರ ಸರ್ಕಾರವು ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದೆ. ಆ ಮೂಲಕ ಎಲ್ಲಾ ವಿಶ್ವಕರ್ಮರು ಹಾಗೂ ಅದಕ್ಕೆ ಸಂಬಂಧಿಸಿದ ವರ್ಗದವರಿಗೂ ಆರ್ಥಿಕವಾಗಿ ಸಬಲತೆ, ವೃತ್ತಿಜೀವನದಲ್ಲಿ ಬೆಳವಣಿಗೆ ಹಾಗೂ ಸ್ವಾವಲಂಬನೆ ದೊರಕುವಂತಾಗಿದೆ’ ಎಂದು ಹೇಳಿದರು.
ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ. ರಾಜು ಮಾತನಾಡಿದರು. ಕಾಳಿಕಾಂಭ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀಧರ್ ಆಚಾರ್ ಉಪನ್ಯಾಸ ನೀಡಿದರು. ಗಣ್ಯರು ವಿಶ್ವಕರ್ಮರ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಸಮುದಾಯದ ಸಾಧಕರನ್ನು ಸನ್ಮಾನಿಸಲಾಯಿತು.
ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ಮಾಜಿ ಅಧ್ಯಕ್ಷ ಹುಲುವಾಡಿ ದೇವರಾಜ್, ಮುಖಂಡರಾದ ರವೀಶ್, ಗೌತಮ್ ಗೌಡ, ಜಯರಾಮ್, ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ಇತರರು ಇದ್ದರು.
ವಿಶ್ವಕ್ಕೆ ಸುಂದರವಾದ ವಾಸ್ತುಶಿಲ್ಪ ನೀಡಿದ ಕೀರ್ತಿ ವಿಶ್ವಕರ್ಮರಿಗೆ ಸಲ್ಲುತ್ತದೆ. ಕೇಂದ್ರ ಸರ್ಕಾರ ಎಲ್ಲಾ ವರ್ಗದವರ ಅಭಿವೃದ್ಧಿಗೆ ಶ್ರಮ ವಹಿಸುತ್ತಿವೆ. ವಿಶ್ವಕರ್ಮ ಸಮುದಾಯದ ಶ್ರೇಯೋಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿವೆ– ಡಾ. ಸಿ.ಎನ್. ಮಂಜುನಾಥ್ ಸಂಸದ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.