ರಾಮನಗರ: ‘ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೆ. 17ರಂದು ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕ ಜಯಂತ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮವನ್ನು ನಗರದ ಕಾಳಿಕಾಂಭ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗುವುದು’ ಎಂದು ತಿಳಿಸಿದರು.
‘ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಊಟ, ಕುಡಿಯುವ ನೀರಿನ ವ್ಯವಸ್ಥೆ, ಆಹ್ವಾನ ಪತ್ರಿಕೆ ಮುದ್ರಣ, ಕಲಾತಂಡಗಳು ಹಾಗೂ ಉಪನ್ಯಾಸಕರ ನೇಮಕ ಕುರಿತು ಅಗತ್ಯ ವ್ಯವಸ್ಥೆಯನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮಾಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.
‘ವಿಶ್ವಕರ್ಮ ಜಯಂತಿಯ ದಿನನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಿಂದ ಕಾಳಿಕಾಂಭ ದೇವಸ್ಥಾನದವರೆಗೆ ವಿಶ್ವಕರ್ಮರ ಚಿತ್ರದ ಮೆರವಣಿಗೆಯನ್ನು ಆಯೋಜಿಸಬೇಕು. ವಿವಿಧ ಜಾನಪದ ಕಲಾತಂಡಗಳು ಸಹ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್, ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.