ADVERTISEMENT

ರಾಮನಗರ | ಅಬಲರ ಸಬಲೀಕರಣಕ್ಕೆ ಸರ್ಕಾರ ಒತ್ತು: ಸಚಿವ ರಾಮಲಿಂಗಾರೆಡ್ಡಿ

ಜಿಲ್ಲಾ ಆಡಳಿತದ ಏರ್ಪಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಅಭಿಮತ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 2:18 IST
Last Updated 16 ಆಗಸ್ಟ್ 2025, 2:18 IST
ಸಚಿವ ರಾಮಲಿಂಗಾರೆಡ್ಡಿ
ಸಚಿವ ರಾಮಲಿಂಗಾರೆಡ್ಡಿ   

ರಾಮನಗರ: ಸ್ವಾತಂತ್ರ್ಯ ಪೂರ್ವದಲ್ಲಿ ಮಹಾತ್ಮ ಗಾಂಧಿ ಕಂಡ ಕನಸು ನನಸಾಗಿಸಲು ಕಾಂಗ್ರೆಸ್ ಸರ್ಕಾರ ಶ್ರಮಿಸುತ್ತಿದೆ. ಬಡವರು, ಮಹಿಳೆಯರು, ಶೋಷಿತರು, ದಲಿತರ ಸಬಲೀಕರಣಕ್ಕೆ ಒತ್ತು ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಆಡಳಿತದಿಂದ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. 

‘ಎಲ್ಲ ವರ್ಗದ ಜನರೂ ಸಾಮರಸ್ಯದಿಂದ ಬಾಳಬೇಕು. ಮಹಿಳೆಯರೂ ಪುರುಷರಂತೆ ಸ್ವತಂತ್ರವಾಗಿ ಬಾಳುವಂತಾಗಬೇಕು. ಇದು ನನ್ನ ಕನಸಿನ ಭಾರತವಾಗಬೇಕು ಎಂದು ಮಹಾತ್ಮ ಗಾಂಧೀಜಿ ಹೇಳುತ್ತಿದ್ದರು. ಅವರ ಕನಸು ನನಸು ಮಾಡುವುದು ನಮ್ಮ ಸರ್ಕಾರದ’ ಗುರಿ ಎಂದರು.

ADVERTISEMENT

ಎಲ್ಲರೂ ಜಾತಿ, ಮತ, ಧರ್ಮ, ಭಾಷೆ ಆಧಾರದ ಭೇದ ಭಾವ ಮರೆತು ದೇಶದ ವೈವಿಧ್ಯತೆ ಗೌರವಿಸುತ್ತ, ಅಖಂಡತೆ ಪಾಲಿಸುತ್ತ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಬೇಕಾಗಿದೆ. ಎಲ್ಲರಿಗೂ ಸಾಮಾಜಿಕ ಹಾಗೂ ಆರ್ಥಿಕ ಸ್ವಾತಂತ್ರ್ಯ ಸಿಗುವ ಮೂಲಕ ರಾಜಕೀಯ ಸ್ವಾತಂತ್ರ್ಯ ಅಬಾಧಿತವಾಗುವಂತೆ ಶ್ರಮಿಸಬೇಕಾಗಿದೆ. ಈ ಗುರಿ ಸಾಧನೆಗಾಗಿ ನಾವೆಲ್ಲರೂ ಒಟ್ಟಾಗಿ ದುಡಿಯೋಣ. ಸ್ವಸ್ಥ, ಸಮೃದ್ಧ, ಸಮ ಸಮಾಜದ ನಾಡು ಕಟ್ಟೋಣ ಎಂದು ಕಿವಿಮಾತು ಹೇಳಿದರು.

ಶಾಂತಿ ಮಾರ್ಗದಿಂದ ಸ್ವಾತಂತ್ರ್ಯ ಗಳಿಸಿದ ಅಪರೂಪದ ಕೀರ್ತಿ ಭಾರತಕ್ಕೆ ಸಲ್ಲಬೇಕು. ಗಾಂಧೀಜಿ ಅವರು ಹುಟ್ಟುವ ಮೊದಲೇ ಭಾರತದಲ್ಲಿ ನಡೆದ ಸಶಸ್ತ್ರ ಹೋರಾಟಗಳನ್ನು ಬ್ರಿಟಿಷರು ದಮನಿಸಿದ್ದರು. ಸಶಸ್ತ್ರ ಯುದ್ಧದ ಮೂಲಕ ಬ್ರಿಟಿಷರನ್ನು ಹಿಮ್ಮೆಟ್ಟಿಸಲು ವ್ಯವಸ್ಥೆ ಇರಲಿಲ್ಲ. ಗಾಂಧೀಜಿ ಒಬ್ಬ ಮಹಾನ್ ವಾಸ್ತವವಾದಿ. ಬ್ರಿಟಿಷರನ್ನು ಎದುರಿಸಲು ಅಹಿಂಸಾತ್ಮಕ ಹೋರಾಟ ಎಂಬ ಪ್ರಬಲ ಅಸ್ತ್ರ ಕಂಡುಕೊಂಡರು. ಮಹನೀಯರನ್ನು ಸ್ಮರಿಸುವುದು ಎಲ್ಲರ ಕರ್ತವ್ಯ ಎಂದರು.

ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ರಾಜು, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚೇತನ್ ಕುಮಾರ್, ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ, ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ, ಜಿ.ಪಂ.ಸಿಇಒ ಅನ್ಮೋಲ್ ಜೈನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ, ಉಪವಿಭಾಗಾಧಿಕಾರಿ ಬಿನೋಯ್, ಪದ್ಮಶ್ರೀ ಪ್ರಶಸ್ತಿ ವಿಜೇತ ಹಾಸನ ರಘು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥ ಸಂಚಲನ ಹಾಗೂ ವಿವಿಧ ಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಸಚಿವರು ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಿದರು. ಅಂಗಾಗ ದಾನ ಮಾಡಿದ ಕುಟುಂಬದವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.