ADVERTISEMENT

ಪ್ರಜ್ಞಾವಂತ ನಾಗರಿಕರು ಅವಶ್ಯ: ನ್ಯಾಯಾಧೀಶೆ ಎಂ.ಜಿ. ಉಮಾ

ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2018, 13:36 IST
Last Updated 10 ಡಿಸೆಂಬರ್ 2018, 13:36 IST
ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಸೋಮವಾರ ಪ್ರಧಾನ ನ್ಯಾಯಾಧೀಶೆ ಎಂ.ಜಿ. ಉಮಾ ಉದ್ಘಾಟಿಸಿದರು
ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಸೋಮವಾರ ಪ್ರಧಾನ ನ್ಯಾಯಾಧೀಶೆ ಎಂ.ಜಿ. ಉಮಾ ಉದ್ಘಾಟಿಸಿದರು   

ರಾಮನಗರ: ‘ದೇಶದ ನಾಗರಿಕರಾಗಿ ನಾವು ನಮ್ಮ ಕರ್ತವ್ಯಗಳನ್ನು ಸೂಕ್ತವಾಗಿ ನಿಭಾಯಿಸಿದಾಗ ಮಾತ್ರ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳನ್ನು ತಡೆಗಟ್ಟಬಹುದು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಎಂ.ಜಿ. ಉಮಾ ಹೇಳಿದರು.

ಇಲ್ಲಿನ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನುಗಳ ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಸೋಮವಾರ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಾಲ ಕಾರ್ಮಿಕರು, ಜೀತ ಪದ್ಧತಿ, ವೇಶ್ಯಾವಾಟಿಕೆಯಂತಹ ಚಟುವಟಿಕೆಗಳು ಪರಿಸರದಲ್ಲಿ ಕಂಡುಬಂದಾಗ ನಾವು ಜವಾಬ್ದಾರಿಯುತವಾಗಿ ಸ್ಪಂದಿಸಿದರೆ ಬಹುಶಃ ಕಾನೂನು ಸುವ್ಯವಸ್ಥೆ ಜತಗೆ ಅದರ ಪರಿಪಾಲನೆ ಸುಲಭವಾಗುತ್ತದೆ. ಒಂದು ಮಾದರಿ ಸಮಾಜ ನಿರ್ಮಾಣದ ಕಲ್ಪನೆ ಸಾಕಾರಗೊಳ್ಳುತ್ತದೆ ಎಂದರು.

ADVERTISEMENT

ಅತ್ಯಂತ ಪ್ರಜ್ಞಾವಂತ ನಾಗರಿಕರು ಈ ಸಮಾಜಕ್ಕೆ ಬೇಕು. ಜತೆಗೆ ಸಂಘ ಸಂಸ್ಥೆಗಳು ಕೈಜೋಡಿಸಬೇಕು. ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳು, ಸ್ವತಂತ್ರ್ಯ ಮತ್ತು ನಿಷ್ಪಕ್ಷಪಾತವಾದ ನ್ಯಾಯಾಂಗ ವ್ಯವಸ್ಥೆ ಬಹಳ ಮುಖ್ಯವಾಗಿ ಬೇಕಾಗುತ್ತದೆ ಎಂದು ತಿಳಿಸಿದರು.

ಸರ್ಕಾರಿ ಕಾನೂನು ಕಾಲೇಜಿನ ಪ್ರಾಧ್ಯಾಪಕ ಪ್ರದೀಪ್ ಮಾತನಾಡಿದರು. ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಉಮೇಶ್ ಮೂಲಿಮನಿ, ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಟಿ.ಗೋಪಾಲಕೃಷ್ಣ, ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಎಸ್. ಹೊನ್ನಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಮುಲ್ಲೈ ಮುಹಿಲನ್, ತಹಶೀಲ್ದಾರ್ ಜಯಣ್ಣ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ವಿ. ದೇವರಾಜ್, ಉಪಾಧ್ಯಕ್ಷ ಎ.ಡಿ. ದೊಡ್ಡಯ್ಯ, ಕಾರ್ಯದರ್ಶಿ ಎಂ.ಎನ್.ನಾಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.