ಚನ್ನಪಟ್ಟಣ: ನಗರದ ಸ್ವಚ್ಛತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಾಸಕ ಸಿ.ಪಿ. ಯೋಗೇಶ್ವರ್ ಹೇಳಿದರು.
ನಗರದ ಶತಮಾನೋತ್ಸವ ಭವನದಲ್ಲಿ ನಗರಸಭೆ ಮತ್ತು ಪೌರ ನೌಕರರ ಸಂಘದ ತಾಲ್ಲೂಕು ಶಾಖೆ ವತಿಯಿಂದ ಬುಧವಾರ ನಡೆದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿ, ಪೌರ ಕಾರ್ಮಿಕರಲ್ಲಿ ನಿವೇಶನ ರಹಿತರಿಗೆ ನಗರ ವ್ಯಾಪ್ತಿಯಲ್ಲಿ ನಿವೇಶನ, ಆರೋಗ್ಯ ಕಾರ್ಡ್ ಸೇರಿದಂತೆ ಸೌಲಭ್ಯ ನೀಡಲಾಗುವುದು. ಈ ಬಗ್ಗೆ ಸಂಬಂಧಪಟ್ಟ ಸಚಿವರ ಗಮನ ಸೆಳೆಯುತ್ತೇನೆ ಎಂದರು.
ನಾಗರಿಕರ ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ತಮ್ಮ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಬೇಕು. ನಗರದಲ್ಲಿ ಸಾರ್ವಜನಿಕರಿಗೆ ಕಸವನ್ನು ಎಲ್ಲೆಂದರಲ್ಲಿ ಬಿಸಾಡುತ್ತಿರುವುದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಸಾರ್ವಜನಿಕರು ಸಹ ಕಸ ಸಂಗ್ರಹಿಸುವ ವಾಹನಗಳಿಗೆ ಕಸ ನೀಡಿ ಸ್ವಚ್ಛತೆಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷ ವಾಸಿಲ್ ಆಲಿಖಾನ್ ಮಾತನಾಡಿ, ಪೌರ ಕಾರ್ಮಿಕರ ಆರೋಗ್ಯದ ಬಗ್ಗೆ ಗಮನ ನೀಡುವ ಉದ್ದೇಶದಿಂದ ಪೌರಕಾರ್ಮಿಕರಿಗೆ ಅಗತ್ಯ ಚಿಕಿತ್ಸೆ ನೀಡಲು ಮೈಸೂರಿನ ಖಾಸಗಿ ಆಸ್ಪತ್ರೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅವರಿಂದ ಉಚಿತ ಚಿಕಿತ್ಸೆ ದೊರೆಯಲಿದೆ. ಹಾಗೆಯೇ ಪೌರ ಕಾರ್ಮಿಕರ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ದೊರೆಯುವಂತೆ ಮಾಡಲು ಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದರು.
ರಾಜ್ಯ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಪ್ರಭಾಕರ್ ಮಾತನಾಡಿ, ಪೌರಕಾರ್ಮಿಕರ ಸಮಸ್ಯೆಗಳಿಗೆ ಸರ್ಕಾರಗಳು ಸ್ಪಂದಿಸಬೇಕು. ಹೊರಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸುವ ಮೂಲಕ ಅವರ ಬದುಕಿಗೆ ಭದ್ರತೆ ನೀಡಬೇಕು. ಮನೆ ನಿರ್ಮಾಣ ಮಾಡಲು ಪ್ರೋತ್ಸಾಹಧನವನ್ನು ಸರ್ಕಾರ ₹15 ಲಕ್ಷಗಳಿಗೆ ಹೆಚ್ಚಿಸಬೇಕು. ನಿವೇಶನ ರಹಿತರಿಗೆ ನಗರ ವ್ಯಾಪ್ತಿಯಲ್ಲಿ ನಿವೇಶನ ಕೊಡಿಸಬೇಕೆಂದು ಮನವಿ ಮಾಡಿದರು.
ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿ ಜಯ ಗಳಿಸಿದ ಪೌರಕಾರ್ಮಿಕರಿಗೆ ಬಹುಮಾನ ನೀಡಲಾಯಿತು. ಹಿರಿಯ ಪೌರಕಾರ್ಮಿಕರು, ಮೃತ ಪೌರ ಕಾರ್ಮಿಕರ ಕುಟುಂಬದವರನ್ನು ಸನ್ಮಾನಿಸಲಾಯಿತು.
ನಗರಸಭೆ ಉಪಾಧ್ಯಕ್ಷ ಶ್ರೀನಿವಾಸಮೂರ್ತಿ, ವೆಂಕಟೇಶ್, ಪೌರಾಯುಕ್ತ ಮಹೇಂದ್ರ, ತಹಶೀಲ್ದಾರ್ ನರಸಿಂಹಮೂರ್ತಿ, ನಗರಸಭಾ ಸದಸ್ಯರು ಹಾಗೂ ಸಂಘದ ಪದಾಧಿಕಾರಿಗಳು, ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.