ADVERTISEMENT

ಆಹಾರ ಗುಣಮಟ್ಟ ಕಾಪಾಡಲು ತಾಕೀತು

ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2019, 16:06 IST
Last Updated 19 ಆಗಸ್ಟ್ 2019, 16:06 IST
ಸಭೆಯಲ್ಲಿ ಜಿ.ಪಂ. ಅಧ್ಯಕ್ಷ ಎಂ.ಎನ್‌. ನಾಗರಾಜು ಮಾತನಾಡಿದರು
ಸಭೆಯಲ್ಲಿ ಜಿ.ಪಂ. ಅಧ್ಯಕ್ಷ ಎಂ.ಎನ್‌. ನಾಗರಾಜು ಮಾತನಾಡಿದರು   

ರಾಮನಗರ: ಜಿಲ್ಲೆಯ ಎಲ್ಲಾ ವಿದ್ಯಾರ್ಥಿನಿಲಯಗಳಿಗೆ ಸರಬರಾಜು ಆಗುತ್ತಿರುವ ಆಹಾರ ಸಾಮಾಗ್ರಿಗಳ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಹೆಚ್ಚಿನ ಆದ್ಯತೆ ನೀಡಿ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಎನ್‌. ನಾಗರಾಜು ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿನಿಲಯಗಳಿಗೆ ಸರಬರಾಜಿನ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಿ, ಪ್ರತಿ ತಿಂಗಳು ವಿದ್ಯಾರ್ಥಿನಿಲಯಗಳಿಗೆ ತಪ್ಪದೇ ಆಹಾರ ಸಾಮಾಗ್ರಿಗಳನ್ನು ಒದಗಿಸಲು ಸೂಕ್ತ ಕ್ರಮ ವಹಿಸಿ ಎಂದರು. ಜಿಲ್ಲೆಯಲ್ಲಿನ ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ, ವಿದ್ಯುತ್ ಸಮಸ್ಯೆ ಕಂಡುಬಂದಿದ್ದು, ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸುವಂತೆ ಸೂಚಿಸಿದರು.

ಉಪಾಧ್ಯಕ್ಷೆ ಜಿ.ಡಿ. ವೀಣಾಕುಮಾರಿ ಮಾತನಾಡಿ ‘ಜಿಲ್ಲಾ ಪಂಚಾಯಿತಿ ಸಭೆಗಳಲ್ಲಿ ಚರ್ಚೆಯಾಗುತ್ತಿರುವ ವಿಷಯಗಳು ಕಡತಗಳಲ್ಲಿಯೇ ಉಳಿದುಕೊಳ್ಳುತ್ತಿವೆ ಹೊರತು ಅನುಷ್ಠಾನವಾಗುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ಚನ್ನಪಟ್ಟಣದ ಬೆಳಕೆರೆ, ನೀಲಕಂಠನಹಳ್ಳಿಯ ಅಂಗನವಾಡಿ ಕೇಂದ್ರಗಳು ಬೀಳುವ ಸ್ಥಿತಿಯಲ್ಲಿವೆ. ಅವುಗಳನ್ನು ಸರಿಪಡಿಸಿ ಎಂದು ಮನವಿ ಮಾಡಿದ್ದೆ. ಆದರೆ ಇನ್ನೂ ದುರಸ್ತಿಯಾಗಿಲ್ಲ. ಕಟ್ಟಡ ಕುಸಿದು ಮಕ್ಕಳಿಗೆ ಹೆಚ್ಚುಕಡಿಮೆಯಾದರೆ ಯಾರು ಹೊಣೆ’ ಎಂದು ಪ್ರಶ್ನಿಸಿದರು.

‘ಅಂಗನವಾಡಿ ಕೇಂದ್ರಗಳನ್ನು ಸರಿಪಡಿಸಲು ಕೋರಿ ಇಲಾಖೆಯ ಗಮನಕ್ಕೆ ಬರಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ದಿಲೀಪ್ ಉತ್ತರಿಸಿದರು.

ಸ್ಥಾಯಿ ಸಮಿತಿ ಅಧ್ಯಕ್ಷ ಎಲ್. ಪ್ರಸನ್ನಕುಮಾರ್ ಮಾತನಾಡಿ ಅಧಿಕಾರಿಗಳು ದೂರವಾಣಿ ಸಂಪರ್ಕಕ್ಕೆ ಸಿಗುವುದಿಲ್ಲ. ಸಂಜೆ 5 ಗಂಟೆಯಾದರೆ ಕರೆಗಳನ್ನು ಸ್ವೀಕರಿಸುವುದಿಲ್ಲ ಎಂದು ದೂರಿದರು. ಜಿಲ್ಲೆಯಲ್ಲಿ ಡೆಂಗಿ ಜ್ವರ ಉಲ್ಬಣಿಸುತ್ತಿದೆ, ಆರೋಗ್ಯ ಇಲಾಖೆಯ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ವೀಣಾಕುಮಾರಿ ತಿಳಿಸಿದರು.

‘ಡೆಂಗಿ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹೆಲ್ತ್ ಕಾರ್ಡ್ ಮಾಡುವಾಗ ನಿಗದಿಪಡಿಸಿದ ಹಣಕ್ಕಿಂತ ಹೆಚ್ಚಿನ ಹಣ ಪಡೆದರೆ ಅಂತಹ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಅಮರ್ ನಾಥ್ ತಿಳಿಸಿದರು.

‘ಹದಿನೈದು ದಿನಗಳಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಔಷಧಿಗಳನ್ನು ಸರಬರಾಜು ಮಾಡಲಾಗುತ್ತದೆ. ಜಿಲ್ಲೆಯಲ್ಲಿ 69 ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಮಾಹಿತಿ ನೀಡಿದರು.

ಬೆಸ್ಕಾಂ ಸಿಬ್ಬಂದಿ ತರಾಟೆಗೆ: ‘ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಬೇಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದ್ದೀರಿ. ಪ್ರತಿಯೊಂದು ಗ್ರಾಮ ಪಂಚಾಯಿತಿಗೆ ವಿದ್ಯುತ್ ಬಿಲ್ ನೀಡಿ ಎಂದು ಹಲವು ಬಾರಿ ಸೂಚಿಸಿದ್ದರೂ ನೀಡಿಲ್ಲ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಬಿಲ್ ಗಳನ್ನು ನೀಡಿ’ ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಉಮೇಶ್ ತಾಕೀತು ಮಾಡಿದರು.

‘ಗಂಗಾ ಕಲ್ಯಾಣ ಯೋಜನೆಯಡಿ 179 ಕೊಳವೆ ಬಾವಿಗಳನ್ನು ಕೊರೆಯಲು ಇನ್ನೂ ಟೆಂಡರ್ ಪ್ರಕ್ರಿಯೆ ಪೂರ್ಣವಾಗಿಲ್ಲ’ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿ ತಿಳಿಸಿದರು. ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್. ಸುಗುಣ, ಶಂಕರ್ ಇದ್ದರು.

203 ಮಿ.ಮೀ. ಮಳೆ

ಜಂಟಿ ಕೃಷಿ ನಿರ್ದೇಶಕ ರವಿ ಮಾಹಿತಿ ನೀಡಿ ‘ಜಿಲ್ಲೆಯಲ್ಲಿ ಈ ಮುಂಗಾರಿನಲ್ಲಿ ಸರಾಸರಿ 203 ಮಿಲಿ ಮೀಟರ್ ಮಳೆಯಾಗಿದ್ದು, ಶೇ 51 ರಷ್ಟು ಬಿತ್ತನೆಯಾಗಿದೆ. ಕನಕಪುರದಲ್ಲಿ ಅತಿ ಕಡಿಮೆ ಬಿತ್ತನೆಯಾಗಿದೆ. ಐದು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ರೈತರು ಈಗಲೂ ಮಧ್ಯಮಾವಧಿ ರಾಗಿ ತಳಿಗಳನ್ನು ಬಿತ್ತನೆ ಮಾಡಬಹುದು’ ಎಂದು ಮಾಹಿತಿ ನೀಡಿದರು.

ಶೂನ್ಯ ಬಂಡವಾಳ ನೈಸರ್ಗಿಕ ಕೃಷಿಯನ್ನು ಕ್ಲಸ್ಟರ್ ಮಟ್ಟದಲ್ಲಿ ಚನ್ನಪಟ್ಟಣದ ಮೂರು ಹಳ್ಳಿಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಸಿರಿ ಧಾನ್ಯ ಬೆಳೆಯಲು ₨10 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಈಗಾಗಲೆ 180 ಹೆಕ್ಟೇರ್ ಪ್ರದೇಶದಲ್ಲಿ ರೈತರು ಸಿರಿದಾನ್ಯಗಳನ್ನು ಬೆಳೆಯಲು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸುವ ಅವಧಿಯನ್ನು ಇದೇ 31ರವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದರು.

* ವಿದ್ಯಾರ್ಥಿನಿಲಯಗಳಿಗೆ ಸರಬರಾಜು ಆಗುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಿ. ಪ್ರತಿ ತಿಂಗಳು ತಪ್ಪದೇ ಆಹಾರ ಸಾಮಗ್ರಿ ಒದಗಿಸಿ

-ಎಂ.ಎನ್. ನಾಗರಾಜು, ಅಧ್ಯಕ್ಷ, ಜಿಲ್ಲಾ ಪಂಚಾಯಿತಿ

* ಕೆಲವು ಮುಖ್ಯರಸ್ತೆಗಳಲ್ಲಿ ರೆಸ್ಟೋರೆಂಟ್‌ ತೆರೆದು ಪರವಾನಗಿ ಪಡೆಯದೇ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಬಕಾರಿ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಿ

-ಎಲ್. ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.