ADVERTISEMENT

ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2012, 5:42 IST
Last Updated 26 ಡಿಸೆಂಬರ್ 2012, 5:42 IST

ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಸ್ಥಾನದಿಂದ ಕೆ.ಎಸ್. ಈಶ್ವರಪ್ಪ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಕೆಲಕಾಲ ಪ್ರತಿಭಟನಾ ಧರಣಿ ಮಾಡಿದರು. ತದನಂತರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಗೆ ಮನವಿ ಸಲ್ಲಿಸಿದರು.

ಈಶ್ವರಪ್ಪ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು, ಭ್ರಷ್ಟಾಚಾರ ಎಸಗುವ ಮೂಲಕ ಅಕ್ರಮ ಆಸ್ತಿ ಗಳಿಕೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಕುರಿತಂತೆ ವಕೀಲರೊಬ್ಬರು ಜಿಲ್ಲಾ ವಿಶೇಷ ಲೋಕಾಯುಕ್ತ ನ್ಯಾಯಾಲಯದಲ್ಲಿ ದಾಖಲೆ ಸಮೇತ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ನ್ಯಾಯಾಲಯ ತನಿಖೆಗೆ ಆದೇಶ ನೀಡಿದೆ. ಅದರಂತೆ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿ, ದಾಳಿ ನಡೆಸಿದ್ದಾರೆ. ಇದು ಬಿಜೆಪಿ ಸರ್ಕಾರದ ಆಡಳಿತ ವೈಖರಿಗೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಉಪಮುಖ್ಯಮಂತ್ರಿ ಸ್ಥಾನದಲ್ಲಿರುವ ಈಶ್ವರಪ್ಪ ವಿರುದ್ಧವೇ ಗುರುತರ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಹಾಗೆಯೇ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಕೂಡಲೇ ಉಪಮುಖ್ಯಮಂತ್ರಿ ಹುದ್ದೆಯಿಂದ ಈಶ್ವರಪ್ಪ ಅವರನ್ನು ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಪಕ್ಷದ ಮುಖಂಡರಾದ ಆರ್. ಪ್ರಸನ್ನಕುಮಾರ್, ಎಚ್.ಎಂ. ಚಂದ್ರಶೇಖರಪ್ಪ, ಎಚ್.ಎಸ್. ಸುಂದರೇಶ್, ಬಲ್ಕೀಷ್ ಭಾನು, ವಿಜಯಲಕ್ಷ್ಮೀ ಪಾಟೀಲ್, ಆರ್. ಶಿವಕುಮಾರ್, ಸಿ. ರುದ್ರೇಶ್, ಆರ್. ಸತ್ಯನಾರಾಯಣ, ಯುವ ಮುಖಂಡರಾದ ಕೆ. ರಂಗನಾಥ್, ರುದ್ರೇಶ್, ಕಿರಣ್, ಗಿರೀಶ್, ರಂಜಿತ್, ಯೋಗೇಶ್,  ಸಿದ್ದಪ್ಪ, ಚಂದ್ರಶೇಖರ್ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT