ADVERTISEMENT

ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ಶೀಘ್ರ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2012, 6:25 IST
Last Updated 26 ಮಾರ್ಚ್ 2012, 6:25 IST

ಶಿವಮೊಗ್ಗ: ಕೊಳೆಗೇರಿಯ ಎಲ್ಲಾ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಕೊಳೆಗೇರಿ ಪ್ರದೇಶ ಸರ್ವೇ ಕಾರ್ಯ ನಡೆಸಿ, ಚಕ್ಕುಬಂದಿ, ಮಾಲೀಕತ್ವದ ವಿವರಗಳನ್ನು ಸಂಗ್ರಹಿಸಲಾಗಿದೆ. ಆದಷ್ಟು ಶೀಘ್ರದಲ್ಲಿಯೇ ಎಲ್ಲರಿಗೂ ಹಕ್ಕುಪತ್ರ ದೊರೆಯಲಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ನಗರದ ನವುಲೆಯಲ್ಲಿ ಶನಿವಾರ ಕರ್ನಾಟಕ ರಾಜ್ಯ ಕೊಳಚೆ ನಿರ್ಮೂಲನಾ ಮಂಡಳಿ, ನಗರಸಭೆ  ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು. 

ಹಕ್ಕುಪತ್ರ ಪಡೆದ ಫಲಾನುಭವಿಗಳು ್ಙ 35 ಸಾವಿರವನ್ನು ಕೊಳಚೆ ನಿರ್ಮೂಲನಾ ಮಂಡಳಿಗೆ ಕಟ್ಟಬೇಕು. ಅಂತಹವರಿಗೆ ಸುಮಾರ‌್ಙು ಮೂರೂವರೆ ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಮನೆ ನಿರ್ಮಿಸಿ ಕೊಡಲಾಗುವುದು ಎಂದರು.

ಕೊಳಚೆ ನಿರ್ಮೂಲನೆ ಮಂಡಳಿ ಈಗ 1,000 ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ 7,900 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಿದೆ ಎಂದು ಹೇಳಿದರು.

ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ ನೀಡಿದ್ದ ಭರವಸೆಯಂತೆ ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ನೀಡಲಾಗುತ್ತಿದೆ. ಹಾಗೆಯೇ, ನಗರದ ವಸತಿ ರಹಿತರಿಗೆ ಕೊಟ್ಟ ಭರವಸೆಯನ್ನು ಈಡೇರಿಸಲು ಕ್ರಮಕೈಗೊಳ್ಳಲಾಗಿದೆ. ಅಡಿಕೆ ಮಂಡಿ ಹಮಾಲರ 620 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ 50 ಎಕರೆ ಪ್ರದೇಶವನ್ನು ಭೂಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಇದು ಪೂರ್ಣಗೊಂಡ ನಂತರ ಸುಮಾರು 1,500 ನಿವೇಶನಗಳನ್ನು ರಚಿಸಿ, ನಿವೇಶನರಹಿತರಿಗೆ ವಿತರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ, ಉಪಾಧ್ಯಕ್ಷ ಎಸ್. ರಾಮು, `ಸೂಡಾ~ ಅಧ್ಯಕ್ಷ ಎಸ್. ದತ್ತಾತ್ರಿ, ನಗರಸಭೆ ಸದಸ್ಯೆ ಲಕ್ಷ್ಮಮ್ಮ ಸಣ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.