ADVERTISEMENT

ಕ್ರೀಡಾಕೂಟ ಸಮಯ ಬದಲಾವಣೆಗೆ ಕಿಮ್ಮನೆ ಭರವಸೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2013, 5:49 IST
Last Updated 24 ಸೆಪ್ಟೆಂಬರ್ 2013, 5:49 IST

ಶಿವಮೊಗ್ಗ:  ಮಲೆನಾಡಿನ 8 ಜಿಲ್ಲೆಗಳಲ್ಲಿ ಕ್ರೀಡಾಕೂಟಗಳು ನಡೆಯುವ ಸಮಯವನ್ನು ಬದಲಾಯಿಸುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದರು.

ನಗರದ ನೆಹರೂ ಕ್ರೀಡಾಂಗಣದಲ್ಲಿ ಈಚೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತೀಯ ಕ್ರೀಡಾ ಪ್ರಾಧಿಕಾರ, ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾ ಒಲಿಂಪಿಕ್ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ದಸರಾ ಮತ್ತು ಪೈಕಾ ಮಹಿಳಾ ಹಾಗೂ 2013–14 ನೇ ಸಾಲಿನ ಗ್ರಾಮೀಣ ಕ್ರೀಡಾಕೂಟ ಉದ್ಘಾಟಿಸಿ  ಅವರು ಮಾತನಾಡಿದರು.

ಮಲೆನಾಡು ಜಿಲ್ಲೆಗಳಲ್ಲಿ ಕ್ರೀಡಾಕೂಟ ನಡೆಸುವ ಸಮಯವೇ ಸರಿಯಿಲ್ಲ. ಅಬ್ಬರದ ಮಳೆಯಲ್ಲಿ ನಡೆಯುವ ಪಂದ್ಯಾವಳಿಯಲ್ಲಿ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆಯಲ್ಲಿ ಅನ್ಯಾಯವಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಕ್ರೀಡಾಕೂಟ ನಡೆಯುವ ಸಮಯ ಬದಲಾಯಿಸುವ ಬಗ್ಗೆ ಕ್ರೀಡಾಸಚಿವರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಹೇಳಿದರು.

ಮಲೆನಾಡು ಜಿಲ್ಲೆಗಳಲ್ಲಿ ಪಂದ್ಯಾವಳಿಗಳ ಸಮಯ ಬದಲಾವಣೆ ಮಾಡಿ, ವ್ಯವಸ್ಥಿತವಾಗಿ ಕ್ರೀಡಾಕೂಟ ನಡೆಸಲು ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಶಾಸಕ ಕೆ.ಬಿ.ಪ್ರಸನ್ನಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಗಾಯತ್ರಿ ಷಣ್ಮುಖಪ್ಪ, ಜಿಲ್ಲಾಧಿಕಾರಿ ವಿಪುಲ್ ಬನ್ಸಲ್, ಜಿಲ್ಲಾ ಪಂಚಾಯ್ತಿ ಸಿಇಒ ಎಸ್‌.ಸಸಿಕಾಂತ್ ಸೆಂಥಿಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.