ADVERTISEMENT

ಗ್ರಾ.ಪಂ. ಸದಸ್ಯರಿಗೆ ಆರೋಗ್ಯ ತರಬೇತಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2011, 7:10 IST
Last Updated 20 ಜನವರಿ 2011, 7:10 IST

ಶಿಕಾರಿಪುರ: ಹದಿಹರೆಯದ ಯುವಕ, ಯುವತಿಯರಲ್ಲಿರುವ ಸಹಜ ವರ್ತನೆ ಬಗ್ಗೆ ಸಮಾಜ ಸೂಕ್ಷ್ಮವಾಗಿ ಗಮನಿಸಿ ಅವರಿಗೆ ಸೂಕ್ತ ಸಲಹೆ ನೀಡಬೇಕು ಎಂದು ತಾಲ್ಲೂಕು ವೈದ್ಯಾಧಿಕಾರಿ ನಾಗರಾಜನಾಯ್ಕಾ ಕರೆ ನೀಡಿದರು.

ತಾಲ್ಲೂಕಿನ ಕಪ್ಪನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಗ್ರಾ.ಪಂ. ಸದಸ್ಯರಿಗಾಗಿ ಬುಧವಾರ ನಡೆದ ಆರೋಗ್ಯ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಮಾಜದಲ್ಲಿನ ಯುವ ಜನರು ಸರಿದಾರಿಯಲ್ಲಿ ನಡೆಯುವಂತೆ ಮಾಡಬೇಕಿರುವುದು ನಮ್ಮೆಲ್ಲರ ಕರ್ತವ್ಯ. ಇದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.

ಇದಕ್ಕಾಗಿ ಗ್ರಾಮದಲ್ಲಿನ ಯುವಜನರು ಅನುಭವಿಸುತ್ತಿರುವ ವಯೋ ಸಹಜ ಲೈಂಗಿಕ ಸಮಸ್ಯೆಗಳು, ಅದಕ್ಕೆ ಅನುಸರಿಸಬೇಕಾದ ಸೂಕ್ತ ಕ್ರಮಗಳ ಬಗ್ಗೆ ಸಲಹೆ ನೀಡಬೇಕು ಎಂದು ಹೇಳಿದರು.

ಸಮಾಜದಲ್ಲಿನ ಅನಾರೋಗ್ಯ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುವುದು ಮಾತ್ರ ಪ್ರಾಥಮಿಕ ಆರೋಗ್ಯ ಘಟಕಗಳ ಕೆಲಸವಲ್ಲ, ಬದಲಿಗೆ ಜನರಲ್ಲಿ ರೋಗಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದ್ದು, ಇದಕ್ಕಾಗಿ ಸರ್ಕಾರ ಇಂತಹ ಯೋಜನೆ ಹಮ್ಮಿಕೊಂಡಿದ್ದು ಇದರ ಅನುಷ್ಠಾನಕ್ಕೆ ಎಲ್ಲ ಜನಪ್ರತಿನಿಧಿಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ತಾಲ್ಲೂಕು ಪಂಚಾಯ್ತಿ ಸದಸ್ಯ ತಿಮ್ಮಪ್ಪ, ಕಪ್ಪನಹಳ್ಳಿ ಗ್ರಾ.ಪಂ. ಅಧ್ಯಕ್ಷ ಬಸವರಾಜಪ್ಪ, ಅಮಟೆಕೊಪ್ಪ ಗ್ರಾ.ಪಂ. ಅಧ್ಯಕ್ಷ ಆನಂದಪ್ಪ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.