ADVERTISEMENT

ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ: ಸಿದ್ಧತೆಗೆ ಸಚಿವರ ತಾಕೀತು

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2017, 5:54 IST
Last Updated 19 ಡಿಸೆಂಬರ್ 2017, 5:54 IST

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ. 6ರಂದು ಶಿವಮೊಗ್ಗ, ತೀರ್ಥಹಳ್ಳಿ ಹಾಗೂ ಸಾಗರದಲ್ಲಿ ಬೃಹತ್ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದು, ಅದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಸೂಚಿಸಿದರು.

ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕ ಸಮಾರಂಭಗಳಲ್ಲಿ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ, ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ ಇತರ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅದಕ್ಕಾಗಿ ಪೂರ್ಣಗೊಂಡಿರುವ ಕಾಮಗಾರಿಗಳ ವಿವರ ಹಾಗೂ ಶಂಕುಸ್ಥಾಪನೆ ಮಾಡಬೇಕಾಗಿರುವ ಕಾಮಗಾರಿಗಳ ವಿವರವನ್ನು ಇಲಾಖಾವಾರು ನೀಡಿ ಸಿದ್ಧಪಡಿಸಬೇಕು ಎಂದು ತಾಕೀತು ಮಾಡಿದರು.

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.5ರಂದು ಶಿವಮೊಗ್ಗಕ್ಕೆ ಬಂದು ವಾಸ್ತವ್ಯ ಮಾಡುವರು. ಜ. 6ರಂದು ಬೆಳಿಗ್ಗೆ ನಗರದ ಸರ್ಕಾರಿ ಪಿಯು ಕಾಲೇಜು ಮೈದಾನದಲ್ಲಿ, ಮಧ್ಯಾಹ್ನ ತೀರ್ಥಹಳ್ಳಿಯ ಪಟ್ಟಣ ಪಂಚಾಯ್ತಿ ಮೈದಾನದಲ್ಲಿ ಹಾಗೂ ಸಂಜೆ ಸಾಗರದ ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು. ಕಾರ್ಯಕ್ರಮಕ್ಕೆ ಸುಸಜ್ಜಿತವಾದ ವೇದಿಕೆ, ಮಾಧ್ಯಮ ಕೇಂದ್ರ ಸೇರಿದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ವಿವಿಧ ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವ ಕುರಿತು ಇಲಾಖಾವಾರು ಮಾಹಿತಿಯನ್ನು ಪಡೆದು ಸಮಾರಂಭಗಳಲ್ಲಿ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಭೇಟಿ ಸಂದರ್ಭದಲ್ಲಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳ ಕುರಿತಾದ ಮಾಹಿತಿ ಪುಸ್ತಕವನ್ನು ಬಿಡುಗಡೆ ಮಾಡಲಾಗುವುದು. ಜಿಲ್ಲಾ ಮಟ್ಟದ ಮಾಹಿತಿಯನ್ನು ಒಳಗೊಂಡ ಪುಸ್ತಕ ಮಾತ್ರವಲ್ಲದೆ ತಾಲ್ಲೂಕುವಾರು ಪುಸ್ತಕ
ವನ್ನು ಸಿದ್ಧಪಡಿಸಲಾಗುತ್ತಿದ್ದು, ಎಲ್ಲಾ ಇಲಾಖೆಗಳು ಸಮರ್ಪಕ ಮಾಹಿತಿಯನ್ನು ಒದಗಿಸಬೇಕು ಎಂದರು.

ಶಾಸಕರಾದ ಕೆ.ಬಿ. ಪ್ರಸನ್ನ ಕುಮಾರ್, ಕಿಮ್ಮನೆ ರತ್ನಾಕರ, ಆರ್. ಪ್ರಸನ್ನಕುಮಾರ್, ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ ಖರೆ, ರಾಕೇಶ್‌ ಕುಮಾರ್, ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.