ಶಿವಮೊಗ್ಗ: ಅಧಿಕಾರಿಗಳು ಜವಾಬ್ದಾರಿ ಅರಿತು ಸಾರ್ವಜನಿಕರ ಆವಶ್ಯಕ ಸೇವೆಯನ್ನು ನಿಗದಿತ ಕಾಲಮಿತಿಯಲ್ಲಿ ಒದಗಿಸಲು ನಾಗರಿಕ ಸೇವಾ ಖಾತರಿ ಕಾಯಿದೆ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ ಹೇಳಿದರು.
ಜಿಲ್ಲಾ ಪಂಚಾಯ್ತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ನಾಗರಿಕ ಸೇವಾ ಖಾತರಿ ಕಾಯಿದೆ-2011ರ ಕುರಿತ ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನಾಗರಿಕ ಸೇವೆ ಒದಗಿಸುವ ಕುರಿತು ಅನೇಕ ಅಧಿನಿಯಮಗಳು ಜಾರಿಯಲ್ಲಿವೆ. ಆಡಳಿತ ವ್ಯವಸ್ಥೆಯಲ್ಲಿ ಹೊಸ ಮೈಲಿಗಲ್ಲಾಗಿರುವ ನಾಗರಿಕ ಸೇವಾ ಖಾತರಿ ಕಾಯ್ದೆಯನ್ನು ಪರಿಣಾಮಕಾರಿ ಆಗಿ ಅನುಷ್ಠಾನಗೊಳಿಸುವ ಗುರುತರವಾದ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದರು.
ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ಆಗುತ್ತಿರುವ ಅನಗತ್ಯ ವಿಳಂಬ, ಇತ್ಯಾದಿ ಕಾರಣಗಳಿಗಾಗಿ ಚುನಾಯಿತ ಪ್ರತಿನಿಧಿಗಳು ಮಧ್ಯಪ್ರವೇಶಿಸಲು ಅವಕಾಶ ಇಲ್ಲದಂತೆ ಸಾರ್ವಜನಿಕರು ಸರ್ಕಾರಿ ಸೇವೆಗಳ ಸೌಲಭ್ಯವನ್ನು ಯಾವುದೇ ಅಡೆತಡೆಗಳಿಲ್ಲದೆ ಸುಲಭವಾಗಿ ಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು.
ಈ ಕಾಯ್ದೆಯಡಿ ಸಾರ್ವಜನಿಕರು ವಿವಿಧ ರೀತಿಯ 151 ಸೇವಾ ಸೌಲಭ್ಯಗಳನ್ನು ಒದಗಿಸುವ ಕಂದಾಯ, ಗ್ರಾಮೀಣಾಭಿವೃದ್ಧಿ, ಕಾರ್ಮಿಕ ಇಲಾಖೆ, ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸೇರಿದಂತೆ 11 ಇಲಾಖೆಗಳನ್ನು ಈ ಕಾಯ್ದೆಯ ವ್ಯಾಪ್ತಿಗೆ ತರಲಾಗಿದೆ ಎಂದರು.
ರಾಜ್ಯದ ಮೊದಲ ತರಬೇತಿ ಶಿವಮೊಗ್ಗದಲ್ಲಿ ನಡೆಯುತ್ತಿದ್ದು, ತರಬೇತಿಯಲ್ಲಿ ಗಮನಿಸಬಹುದಾದ ವಿಷಯಗಳ ಕುರಿತು ತಿದ್ದುಪಡಿ, ಮಾರ್ಪಾಡು ಮಾಡಬೇಕೆನಿಸಿದ್ದಲ್ಲಿ ಅಂತಹ ವಿಷಯಗಳನ್ನು ಗುರುತಿಸಿ, ನೀಡಿದಲ್ಲಿ ಕಾಯ್ದೆಯ ತಿದ್ದುಪಡಿಯ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿ.ಪಂ. ಉಪ ಕಾರ್ಯದರ್ಶಿ ಹನುಮನರಸಯ್ಯ ಮಾತನಾಡಿ, ಸಾರ್ವಜನಿಕರಿಗೆ ಅಧಿನಿಯಮದ ಕುರಿತು ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಮ್‌ಪ್ರಸಾದ್, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ನಾಗರಾಜ್, ಮೈಸೂರು ತರಬೇತಿ ಕೇಂದ್ರದ ಉಪ ನಿರ್ದೇಶಕ ನಾಗರಾಜ್, ತರಬೇತಿ ಸಂಸ್ಥೆಯ ನಿವೃತ್ತ ಜಂಟಿ ನಿರ್ದೇಶಕ ಇಕ್ಬಾಲ್ ಹುಸೇನ್ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.
ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.