ಶಿವಮೊಗ್ಗ: ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾನಿಗೆ ಒಳಗಾಗಿರುವ ಕೃಷಿ, ತೋಟಗಾರಿಕೆ ಪ್ರದೇಶ ಹಾಗೂ ರಸ್ತೆ-ಸೇತುವೆಗಳ ಕುರಿತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮೂರು ದಿನಗಳ ಒಳಗಾಗಿ ಸಮಗ್ರ ವರದಿ ನೀಡುವಂತೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಶುಭಾ ಕೃಷ್ಣಮೂರ್ತಿ ಸೂಚಿಸಿದರು.
ಜಿಲ್ಲಾ ಪಂಚಾಯ್ತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ 20 ಅಂಶ ಕಾರ್ಯಕ್ರಮಗಳು ಸೇರಿದಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೆರೆ ಮತ್ತು ಬರದಿಂದಾಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರೀತಿಯ ಅನೇಕ ಸಮಸ್ಯೆಗಳು ತಲೆದೋರಿವೆ. ಇವುಗಳ ಕುರಿತು ಅಧಿಕಾರಿಗಳು ಸ್ಥಳಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿ, ನಷ್ಟದ ಪ್ರಮಾಣ, ಬೆಳೆ, ಆಸ್ತಿ ನಷ್ಟ, ಪರಿಹಾರ ಕ್ರಮ ಮತ್ತಿತರ ವಿಷಯಗಳ ಕುರಿತು ಸಮಗ್ರ ವರದಿ ಸಲ್ಲಿಸಬೇಕು. ಈ ವಿಷಯದಲ್ಲಿ ಸಮಸ್ಯೆಗಳು ಕಂಡುಬಂದಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ ತೋರುವ ಹಾಗೂ ಅಸಮರ್ಪಕ ವರದಿ ಸಲ್ಲಿಸುವ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಂಪ್ಯೂಟರ್ ಹೊಂದಿರುವ ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ಶಿಕ್ಷಕರಿಲ್ಲದೆ, ಕಂಪ್ಯೂಟರ್ ಶಿಕ್ಷಣ ಸ್ಥಗಿತಗೊಂಡಿದೆ. ಅಲ್ಲದೇ, ಪ್ರಾಥಮಿಕ ಶಾಲೆಗಳಲ್ಲಿ ಕೊರತೆ ಇರುವ 639 ಶಿಕ್ಷಕರ ಹುದ್ದೆಯನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅನುಮತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಶುಭಾ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್.ಎಸ್. ಕುಮಾರ್ ಅವರಿಗೆ ಸೂಚಿಸಿದರು.
ಜಂಟಿ ಕೃಷಿ ನಿರ್ದೇಶಕ ಡಾ.ಶಿವಮೂರ್ತಪ್ಪ ಮಾತನಾಡಿ, ಸೊರಬ ತಾಲ್ಲೂಕು ಒಂದರಲ್ಲಿಯೇ ಸುಮಾರು 988 ಎಕರೆಯಷ್ಟು ಭೂಮಿ ಜಲಾವೃತಗೊಂಡಿದೆ. ಮಳೆಯಿಂದಾದ ಹಾನಿಯ ಕುರಿತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಂಪೂರ್ಣ ವರದಿಯನ್ನು ಶೀಘ್ರವೇ ಸಲ್ಲಿಸಲಾಗುವುದು ಎಂದರು.
ನೆರೆಯಿಂದ ಬೆಳೆ ಹಾನಿಗೆ ರೈತರಿಗೆ ಪ್ರತಿ ಎಕರೆಗೆ ರೂ. 1,200ಗಳ ಪರಿಹಾರ ಧನ ನೀಡಲಾಗುತ್ತಿದೆ. ಪ್ರಸ್ತುತ ಈ ಪದ್ಧತಿ ಅಸಮರ್ಪಕವಾಗಿದೆ. ಪ್ರತಿ ಎಕರೆಗೆ ಕನಿಷ್ಠ ರೂ. 15,000 ಪರಿಹಾರ ಧನ ವಿತರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ ನಾಯ್ಕ ಸಭೆಯಲ್ಲಿ ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿದರು.
ಅಲ್ಲದೇ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿರುವವರ ವಿರುದ್ಧ ಸೂಕ್ತಕ್ರಮ ಕೈಗೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ಸೂಚಿಸಿದರು.
ಜಿಲ್ಲೆಯ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 119 ಶಿಕ್ಷಕರ ಪೈಕಿ 90 ಶಿಕ್ಷಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದರು.
ಸಭೆಯಲ್ಲಿ ಉಪಾಧ್ಯಕ್ಷ ಎಚ್. ಗಂಗಾಧರಪ್ಪ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಗೀತಾ ಮಲ್ಲಿಕಾರ್ಜುನ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಈಶ್ವರಪ್ಪ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ.ಸಂಜಯ್ ಬಿಜ್ಜೂರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.