ADVERTISEMENT

ಪಕ್ಷ ಸಂಘಟನೆಗೆ ಶ್ರಮ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 6 ಜನವರಿ 2014, 6:02 IST
Last Updated 6 ಜನವರಿ 2014, 6:02 IST

ಶಿವಮೊಗ್ಗ: ರಾಜ್ಯದ ಜನತೆ ಹಾಗೂ ಹಿರಿಯರ ಅಪೇಕ್ಷೆ ಮೇರೆಗೆ ಬಿಜೆಪಿಯೊಂದಿಗೆ ಕೆಜೆಪಿ ವಿಲೀನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಮೋದಿ ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ಬೇಷರತ್ತಾಗಿ ಬಿಜೆಪಿಯೊಂದಿಗೆ ಸೇರ್ಪಡೆಯಾಗಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.

ಮತಗಳ ವಿಭಜನೆಯಿಂದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಬೇಕಾಯಿತು. ಆದರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತಗಳ ವಿಭಜನೆ ಆಗಬಾರದು ಎಂದ ಅವರು, ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 19 ಸ್ಥಾನಗಳಲ್ಲಿ ಜಯಗಳಿಸಿತ್ತು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 19ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಜೆಪಿ ಕಾರ್ಯಕರ್ತರಿಗೆ ಯಾವುದೇ ಅನ್ಯಾಯವಾಗದ ರೀತಿ ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಪ್ರಮುಖ ಸ್ಥಾನಗಳು ಸಿಗಲಿವೆ. ಅದರಲ್ಲಿ ಯಾವುದೇ ಅನುಮಾನಗಳಿಲ್ಲ ಎಂದು ಅಭಿಪ್ರಾಯಪಟ್ಟರು.

‘ಕೆಜೆಪಿ ಸಂಸ್ಥಾಪಕ ಪದ್ಮನಾಭ ಪ್ರಸನ್ನ, ನನಗೂ ಯಾವುದೇ ಸಂಬಂಧ ಇಲ್ಲ. ಈ ಹಿಂದೆಯೇ ಚುನಾವಣಾ ಆಯೋಗ ಕೆಜೆಪಿ ಅಧ್ಯಕ್ಷರ ಕುರಿತಂತೆ ಸ್ಪಷ್ಟೀಕರಣ ನೀಡಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.