ADVERTISEMENT

ಪರಿಹಾರ ವಿತರಣೆ ಪ್ರಕ್ರಿಯೆ ಆರಂಭ: ಕಿಮ್ಮನೆ

ಅತಿವೃಷ್ಟಿ ಹಾನಿ; ಶೇ 90ರಷ್ಟು ಸಮೀಕ್ಷೆ ಪೂರ್ಣ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2013, 8:52 IST
Last Updated 16 ಸೆಪ್ಟೆಂಬರ್ 2013, 8:52 IST

ಶಿವಮೊಗ್ಗ: ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿ ಬಗ್ಗೆ ನಡೆಸುತ್ತಿರುವ ಸಮೀಕ್ಷೆ ಶೇ.90ರಷ್ಟು ಪೂರ್ಣಗೊಂಡಿದ್ದು, ಪರಿಹಾರ ವಿತರಿಸುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ ತಿಳಿಸಿದರು.

ತಾಲ್ಲೂಕಿನ ಗಾಜನೂರು ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸುವರ್ಣ ಗ್ರಾಮಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಹಾಗೂ ಸರ್ಕಾರಿ ಪ್ರೌಢಶಾಲೆಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಅತಿವೃಷ್ಟಿ ಹಾನಿಗೆ ಒಳಗಾದ ಎಲ್ಲಾ ಸಂತ್ರಸ್ತರಿಗೂ ಪರಿಹಾರ ಒದಗಿಸುವ ಸಂಬಂಧ ಜಿಲ್ಲಾಡಳಿತದೊಂದಿಗೆ ಮತ್ತೊಂದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕ ಆಸ್ತಿ ನಷ್ಟದ ಸಂಬಂಧ ಅಂದಾಜು ಮಾಡಲಾಗಿದ್ದು, ಪುನರ್ವಸತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ರಾಜ್ಯ ಸಂಪೂರ್ಣ ಸಾಕ್ಷರತಾ ರಾಜ್ಯವನ್ನಾಗಿಸುವ ಪ್ರಯತ್ನ ಮುಂದುವರಿದ್ದು, ರಾಜ್ಯದ ಸಾಕ್ಷರತಾ ಯೋಜನೆ ಅನುಷ್ಠಾನದ ಬಗ್ಗೆ ಕೇಂದ್ರ ಸರ್ಕಾರ ಪ್ರಶಂಸೆ ವ್ಯಕ್ತಪಡಿಸಿದೆ ಎಂದು ಕಿಮ್ಮನೆ ತಿಳಿಸಿದರು.

ಈ ಹಿಂದಿನ ಸಾಕ್ಷರತಾ ಆದೋಲನದ ಫಲವಾಗಿ ರಾಜ್ಯದಲ್ಲಿ ಶೇ 66.4 ಸಾಕ್ಷರತೆ ಇತ್ತು. ಕಳೆದ ವರ್ಷದ ವರದಿಯಂತೆ ಅದು ಶೇ 75ಕ್ಕೆ ಏರಿಕೆ ಆಗಿದೆ. ಮುಂದೆ ಶೇ 100ರಷ್ಟು ಸಂಪೂರ್ಣ ಸಾಕ್ಷರತಾ ರಾಜ್ಯವನ್ನಾಗಿಸುವ ಗುರಿ ಹೊಂದಲಾಗಿದೆ. ಈ ಸಂಬಂಧ ಎಲ್ಲ ಪ್ರಯತ್ನಗಳು ನಡೆಯುತ್ತಿವೆ ಎಂದರು.

ರಾಜ್ಯದಲ್ಲಿ ಸಂಪೂರ್ಣ ಸಾಕ್ಷರತಾ ಯೋಜನೆ ಅನುಷ್ಠಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ 20 ಸಾವಿರ ಡಾಲರ್ ಅನುದಾನ ಬಂದಿದೆ. ಅಲ್ಲದೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ರಾಜ್ಯದ 17 ಜಿಲ್ಲೆಗಳಲ್ಲಿ ಸಾಕ್ಷರತಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಇದಕ್ಕಾಗಿ ರಾಜ್ಯದಲ್ಲಿ ಸುಮಾರು 2 ಲಕ್ಷ ಜನರನ್ನು ತೊಡಗಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ತದನಂತರ ಗಾಜನೂರು ಗ್ರಾಮ ಪಂಚಾಯ್ತಿ ವತಿಯಿಂದ ಸಚಿವ ಕಿಮ್ಮನೆ ರತ್ನಾಕರ ಅವರನ್ನು ಸನ್ಮಾನಿಸಲಾಯಿತು. ಗ್ರಾಮಪಂಚಾಯ್ತಿ ಅಧ್ಯಕ್ಷೆ ಶಿವಲಿಂಗಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಪಂಚಾಯ್ತಿ ಸದಸ್ಯ ಸುಂದರೇಶ್, ತಾಲ್ಲೂಕು ಪಂಚಾಯ್ತಿ ಸದಸ್ಯ ಪರಮೇಶ್, ಮುಖಂಡರಾದ ಗಣೇಶ್, ಮಂಜಪ್ಪಮ್ಮ, ಕೃಷ್ಣಪ್ಪ, ಸತೀಶ್, ಬೀರಭದ್ರಪ್ಪ, ನೂರ್‌ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.