ADVERTISEMENT

ಬಿಜೆಪಿ,ಕಾಂಗ್ರೆಸ್‌, ಜೆಡಿಎಸ್ ತ್ರಿಕೋನ ಸ್ಪರ್ಧೆ

ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ: ತಾಲ್ಲೂಕಿನಲ್ಲಿ ಬಿರುಸಗೊಂಡ ರಾಜಕೀಯ ಚಟುವಟಿಕೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2018, 11:03 IST
Last Updated 18 ಏಪ್ರಿಲ್ 2018, 11:03 IST

ಶಿಕಾರಿಪುರ: ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೋಣಿ ಮಾಲತೇಶ್‌ ಹೆಸರು ಘೋಷಣೆಯಾದ ಹಿನ್ನೆಲೆ ತಾಲ್ಲೂಕಿನಲ್ಲಿ ಚುನಾವಣಾ ತಯಾರಿ ಚಟುವಟಿಕೆಗಳು ಬಿರುಸುಗೊಂಡಿವೆ.

ತಾಲ್ಲೂಕಿನಲ್ಲಿ ಚುನಾವಣಾ ಪೂರ್ವ ಚಟುವಟಿಕೆಗಳನ್ನು ಗಮನಿಸಿದರೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಹೆಚ್ಚು. ಪ್ರಸ್ತುತ ಬಿಜೆಪಿಯಿಂದ ಸಂಸದ ಬಿ.ಎಸ್‌. ಯಡಿಯೂರಪ್ಪ ಹಾಗೂ ಜೆಡಿಎಸ್‌ನಿಂದ ಎಚ್‌.ಟಿ. ಬಳಿಗಾರ್‌ ಏ.19ರಂದು ನಾಮ ಪತ್ರ ಸಲ್ಲಿಸಲಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಗೋಣಿ ಮಾಲತೇಶ್‌ ಏ.23ರಂದು ನಾಮ ಪತ್ರ ಸಲ್ಲಿಸಲಿದ್ದಾರೆ.

ಪ್ರಸ್ತುತ ತಾಲ್ಲೂಕಿನಲ್ಲಿ ಪ್ರಚಾರ ನಡೆಸುವಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮುಂದಿದೆ. ಪ್ರಸ್ತುತ ಬಿಜೆಪಿ ಅಭ್ಯರ್ಥಿ ಸಂಸದ ಬಿ.ಎಸ್‌. ಯಡಿಯೂರಪ್ಪ ಪರ ಶಾಸಕ ಬಿ.ವೈ. ರಾಘವೇಂದ್ರ, ಕುಟುಂಬ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಪಟ್ಟಣ ಹಾಗೂ ಗ್ರಾಮೀಣಾ ಭಾಗದಲ್ಲಿ ಪ್ರಚಾರ ನಡೆಸಿದ್ದಾರೆ.

ADVERTISEMENT

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಾಲ್ಲೂಕಿನ ಅಭಿವೃದ್ಧಿಗಾಗಿ ನೀಡಿದ ಕೊಡುಗೆ ಹಾಗೂ ಯಡಿಯೂರಪ್ಪ ಪುನಃ ಮುಖ್ಯಮಂತ್ರಿಯಾಗಲಿದ್ದು, ತಾಲ್ಲೂಕಿನ ಜನತೆಗೆ ಪೂರಕವಾದ ನೀರಾವರಿ ಯೋಜನೆ ಅನುಷ್ಠಾನ ಮಾಡಲಿದ್ದಾರೆ ಎಂದು ಮತಯಾಚನೆ ಮಾಡುತ್ತಿದ್ದಾರೆ.

ಜೆಡಿಎಸ್‌ ಅಭ್ಯರ್ಥಿ ಎಚ್‌.ಟಿ. ಬಳಿಗಾರ್‌ ಕೂಡ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರು ಚುನಾವಣೆ ನಂತರ ಜೆಡಿಎಸ್‌ ರಾಜ್ಯ ಘಟಕ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು, ತಾಲ್ಲೂಕಿನಲ್ಲಿ ಸಮಗ್ರ ನೀರಾವರಿ ಯೋಜನೆ ಅನುಷ್ಠಾನ ಮಾಡಲಿದ್ದಾರೆ ಎಂದು ಮತ ಯಾಚಿಸುತ್ತಿದ್ದಾರೆ.

ಲಿಂಗಾಯಿತ ಸಮುದಾಯ ಹೊರತು ಪಡಿಸಿ ಕುರುಬ ಸಮಾಜದ ಮುಖಂಡನಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಕಾಂಗ್ರೆಸ್‌ ಕಚೇರಿಯಲ್ಲಿ ಚುನಾವಣೆ ಎದುರಿಸುವ ಕುರಿತು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಗೋಣಿ ಮಾಲತೇಶ್‌ ಚರ್ಚೆ ನಡೆಸಿದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಕೆಲವು ಸಾವಿರ ಮತಗಳ ಅಂತರದಿಂದ ಸೋಲು ಅನುಭವಿಸಿ, ಬಿಜೆಪಿ ಸೇರ್ಪಡೆಗೊಂಡಿದ್ದ ಸಾದರ ಲಿಂಗಾಯತ ಸಮುದಾಯದ ಮುಖಂಡ ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಎಸ್‌. ಶಾಂತವೀರಪ್ಪಗೌಡ್ರು ಹಾಗೂ 1999ರಲ್ಲಿ ಸಂಸದ ಯಡಿಯೂರಪ್ಪ ವಿರುದ್ಧ ಗೆಲುವು ಸಾಧಿಸಿದ್ದ ಮಾಜಿ ಶಾಸಕ ಬಿ.ಎನ್‌. ಮಹಾಲಿಂಗಪ್ಪ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಪ್ರಯತ್ನವನ್ನು ಕಾಂಗ್ರೆಸ್‌ ಅಭ್ಯರ್ಥಿ ಗೋಣಿ ಮಾಲತೇಶ್‌ ಮಾಡುತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ‌

ಎಚ್‌.ಎಸ್‌. ರಘು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.