ADVERTISEMENT

ಮುಂದುವರಿದ ವಿದ್ಯಾರ್ಥಿಗಳ ಪ್ರತಿಭಟನೆ

ಪಶುವೈದ್ಯ ಕಾಲೇಜು ಮಾನ್ಯತೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2013, 5:48 IST
Last Updated 7 ಸೆಪ್ಟೆಂಬರ್ 2013, 5:48 IST

ಶಿವಮೊಗ್ಗ: ಪಶುವೈದ್ಯಕೀಯ ಕಾಲೇಜಿಗೆ ಶಾಶ್ವತ ಮಾನ್ಯತೆ ದೊರಕಿಸಿಕೊಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಶುಕ್ರವಾರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಮೂರು ದಿನಗಳಿಂದಲೂ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ಸರ್ಕಾರ ಇದುವರೆಗೂ ಸಮಸ್ಯೆಗೆ ನಿರ್ದಿಷ್ಟ ಪರಿಹಾರ ಸೂಚಿಸಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಸಮಸ್ಯೆ ಪರಿಹಾರವಾಗುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ. ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ಕೂಡಲೇ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಭಾರತೀಯ ಪಶು ವೈದ್ಯಕೀಯ ಪರಿಷತ್ತು ಸೂಚಿಸಿದ ಸಲಹೆಗಳನ್ನು ಅಳವಡಿಸುವುದಕ್ಕೆ ವಿದ್ಯಾಲಯ ಯಾವುದೇ ಪ್ರಯತ್ನ ನಡೆಸಿಲ್ಲ. ಇದರಿಂದ ಮಾನ್ಯತೆ ಸಿಕ್ಕಿಲ್ಲ. ಈಗಾಗಲೇ ಪದವಿ ಮುಗಿಸಿದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಅಲ್ಲದೇ, ಹಾಲಿ ವಿದ್ಯಾಭ್ಯಾಸ ಮಾಡುತ್ತಿರುವ ನೂರಾರು ವಿದ್ಯಾರ್ಥಿಗಳ ಭವಿಷ್ಯವೂ ಮಂಕಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಈ ವರ್ಷ ಮಾರ್ಚ್‌ನಲ್ಲಿ ಪರಿಷತ್ತಿನ ಮಾನ್ಯತೆ ಸಿಗಲಿದೆ ಎನ್ನುವ ಮಾಹಿತಿ ಇತ್ತು. ಆದರೆ, ಈಗ ಮಾನ್ಯತೆ ನಿರಾಕರಿಸಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ರಾಜ್ಯ ಸರ್ಕಾರ ಮಾನ್ಯತೆ ಕೊಡಿಸುವಲ್ಲಿ ಹಾಗೂ ರಾಜ್ಯ ಪಶುವೈದ್ಯಕೀಯ ಪರಿಷತ್ತಿನ ನೋಂದಣಿ ಸಂಖ್ಯೆ ನೀಡುವಲ್ಲಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಇದರಿಂದ 180 ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಸರ್ಕಾರ ಕೂಡಲೇ ಪಶು ವೈದ್ಯಕೀಯ ಕಾಲೇಜಿನ ಮಾನ್ಯತೆಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಿ, ವಿದ್ಯಾರ್ಥಿಗಳಿಗೆ ಕರ್ನಾಟಕ ಪಶು ವೈದ್ಯಕೀಯ ಪರಿಷತ್ತಿನ ನೋಂದಣಿ ಸಂಖ್ಯೆ ನೀಡಲು ಮುಂದಾಗಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.