ADVERTISEMENT

ಮೇ 5ಕ್ಕೆ ನರೇಂದ್ರ ಮೋದಿ ಶಿವಮೊಗ್ಗಕ್ಕೆ

ಶಿಕಾರಿಪುರ: ಬಿಜೆಪಿ ಶಕ್ತಿ ಕೇಂದ್ರದ ಪದಾಧಿಕಾರಿಗಳ ಸಭೆಯಲ್ಲಿ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2018, 13:31 IST
Last Updated 26 ಏಪ್ರಿಲ್ 2018, 13:31 IST


ಶಿಕಾರಿಪುರ: ಚುನಾವಣೆಯಲ್ಲಿ 50 ಸಾವಿರ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಲು ಕಾರ್ಯತಂತ್ರ ರೂಪಿಸಬೇಕು ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಬಿಜೆಪಿ ಶಕ್ತಿ ಕೇಂದ್ರದ ಪದಾಧಿಕಾರಿಗಳ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

‘15ದಿನ ಮುಖಂಡರು ಹಾಗೂ ಕಾರ್ಯಕರ್ತರು ಶ್ರಮಹಾಕಬೇಕು. ಪ್ರತಿನಿತ್ಯ ರಾಜ್ಯದ 5ವಿಧಾನಸಭಾ ಕ್ಷೇತ್ರದಲ್ಲಿ ನಾನು ಪ್ರಚಾರ ನಡೆಸಲಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯದ 13 ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಮೇ.5ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

ADVERTISEMENT

‘ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಮಾತ್ರ ನಾನು ಪ್ರಧಾನಿ ಮೋದಿ ಜತೆ ಪಾಲ್ಗೊಳ್ಳುತ್ತೇನೆ. ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಲಹೆಯಂತೆ ನಾನು ರಾಜ್ಯದ ಹಲವೆಡೆ ಪ್ರಚಾರ ನಡೆಸುತ್ತೀರುತ್ತೇನೆ’ ಎಂದು ಸ್ಪಷ್ಟನೆ ನೀಡಿದರು.

ಯಾವುದೇ ಜಾತಿ ಭೇದವಿಲ್ಲದೇ ಎಲ್ಲಾ ಸಮಾಜದ ನಾಯಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ನೀಡಲಾಗಿದೆ. ಅಂಬೇಡ್ಕರ್‌ ಅವರ ಸೋಲಿಗೆ ಕಾರಣವಾದ ಕಾಂಗ್ರೆಸ್‌ ಬಗ್ಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರಿಗೆ ಆಕ್ರೋಶ ಇದ್ದು, ಈ ವರ್ಗದ ಶೇ 80ರಷ್ಟು ಜನರು ಬಿಜೆಪಿಗೆ ಮತ ನೀಡಲಿದ್ದಾರೆ. ರಾಜ್ಯದ ಅಧಿಕಾರ ಚುಕ್ಕಾಣಿ   ಹಿಡಿಯಲಿದ್ದೇವೆ ಎಂದರು.

ಶಾಸಕ ಬಿ.ವೈ. ರಾಘವೇಂದ್ರ ಮಾತನಾಡಿ, ‘ಬಿ.ಎಸ್‌. ಯಡಿಯೂರಪ್ಪ ಅವರನ್ನು ಹೆಚ್ಚಿನ ಅಂತರದಿಂದ ಗೆಲ್ಲಿಸಲು ಪ್ರತಿಯೊಬ್ಬರು ಶ್ರಮಿಸಬೇಕು. ಶಕ್ತಿ ಕೇಂದ್ರಗಳ ಜವಾಬ್ದಾರಿಯನ್ನು ಪದಾಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಬೇಕು. ವೈಮನಸ್ಸಿನಿಂದ ಪಕ್ಷದ ಕಾರ್ಯಗಳಿಂದ ದೂರ ಇರುವ ನಾಯಕರ ಮನ ಓಲೈಸುವ ಕಾರ್ಯ ಮಾಡಬೇಕು’ ಎಂದು ಸಲಹೆ ನೀಡಿದರು.

‘ಪ್ರಸ್ತುತ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮುಖಂಡರು ಕಳೆದ ಉಪಚುನಾವಣೆಯಲ್ಲಿ ಸೂಟ್‌ಕೇಸ್‌ ವ್ಯವಹಾರ ಮುಗಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೀಡಿದ ಜನಪರ ಯೋಜನೆ ಹಾಗೂ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಾಲ್ಲೂಕಿನ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಮತದಾರರಿಗೆ ತಿಳಿಸಿ ಮತಯಾಚನೆ ಮಾಡಬೇಕು’ ಎಂದು ಸಲಹೆ ನೀಡಿದರು.

ಬಿಜೆಪಿ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಗುರುಮೂರ್ತಿ ಮಾತನಾಡಿ, ‘ಚುನಾವಣೆಯಲ್ಲಿ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿದವರು ಠೇವಣಿ ಕಳೆದುಕೊಳ್ಳುವಂತೆ ಪ್ರತಿಯೊಂದು ಹಳ್ಳಿಯಲ್ಲಿ ಬಿಜೆಪಿ ಶಕ್ತಿ ಹೆಚ್ಚಿಸಿಕೊಳ್ಳಬೇಕು. ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಹೋಗುತ್ತಿರುವುದರಿಂದ ಈ ಕ್ಷೇತ್ರದಲ್ಲಿ ಪ್ರತಿಯೊಬ್ಬ ಮುಖಂಡರು ಹಾಗೂ ಕಾರ್ಯಕರ್ತರು ನಾವೇ ಯಡಿಯೂರಪ್ಪ ಎಂದು ಮತ ಯಾಚಿಸಬೇಕು’ ಎಂದರು.

ಮುಖಂಡರಾದ ಕೆ.ಪಿ. ನಂಜುಂಡಿ, ಕೆ. ಶೇಖರಪ್ಪ, ಪದ್ಮನಾಬ್‌ ಭಟ್‌, ಕೆ. ಹಾಲಪ್ಪ, ರಾಮಾನಾಯ್ಕ, ಟಿ.ಎಸ್‌. ಮೋಹನ್‌, ಅಗಡಿ ಅಶೋಕ್‌, ರೇವಣಪ್ಪ, ಜೆ. ಸುಕೇಂದ್ರಪ್ಪ, ವಸಂತಗೌಡ್ರು, ಚಾರಗಲ್ಲಿ ಪರಶುರಾಮ್‌, ಈಶ್ವರಪ್ಪ, ಬಂಗಾರಿನಾಯ್ಕ ಉಪಸ್ಥಿತರಿದ್ದರು.

ರಾಹುಲ್‌ ಗಾಂಧಿ ಎಳಸು
‘ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವ ಇಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಇನ್ನು ಎಳಸು’ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಲೇವಡಿ ಮಾಡಿದರು.

‘ರಾಹುಲ್‌ ಗಾಂಧಿ ರಾಜ್ಯಕ್ಕೆ ಬಂದು ಹುಚ್ಚು ಹುಚ್ಚಾಗಿ ಮಾತನಾಡುವುದರಿಂದ ನಮಗೆ ಲಾಭವಾಗುತ್ತದೆ. ಕಾಂಗ್ರೆಸ್‌ ಮನೆ ಒಡೆದಿದ್ದು, ನಮ್ಮ ಪಕ್ಷದ ರಾಷ್ಟ್ರೀಯ ನಾಯಕರಿಗೆ ಪೈಪೋಟಿ ಕೊಡುವ ಶಕ್ತಿ ಕಾಂಗ್ರೆಸ್‌ ನಾಯಕರಿಗೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಣ ಬಲದ ಮೇಲೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಹೊರಟಿದ್ದಾರೆ. ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡು ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲವು ಸಾಧಿಸಲು ಸಾಧ್ಯವಿಲ್ಲ’ ಎಂದು ಭವಿಷ್ಯ ನುಡಿದರು.

ನಾವು ಅಧಿಕಾರಕ್ಕೆ ಬರುವ ಬಗ್ಗೆ ಕಾರ್ಯಕರ್ತರಲ್ಲಿ ಅನುಮಾನ ಬೇಡ. ರಾಜ್ಯದಲ್ಲಿ ಬಿಜೆಪಿ ಗಾಳಿ ಬೀಸುತ್ತಿದ್ದು,ಸ್ವಂತ ಶಕ್ತಿಯ ಮೇಲೆ ಬಹುಮತ ಪಡೆದು ಸರ್ಕಾರ ರಚಿಸುತ್ತೇವೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಸಮ್ಮುಖದಲ್ಲಿ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.