ADVERTISEMENT

ರೂ106 ಕೋಟಿ ವೆಚ್ಚದಲ್ಲಿ ಯೋಜನೆ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2012, 5:00 IST
Last Updated 8 ಅಕ್ಟೋಬರ್ 2012, 5:00 IST

ಸಾಗರ:  ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ  ರೂ 106 ಕೋಟಿ ವೆಚ್ಚದಲ್ಲಿ ನೂತನ ಯೋಜನೆ ರೂಪಿಸಲಾಗುವುದು ಎಂದು ರಾಜ್ಯದ ಪ್ರವಾಸೋದ್ಯಮ ಸಚಿವ ಆನಂದ್‌ಸಿಂಗ್ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿ ಕುರಿತು ಭಾನುವಾರ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮಾತನಾಡಿದ ಅವರು, ಶಿವಮೊಗ್ಗ-ಆಗುಂಬೆ, ಆಗುಂಬೆ-ಜೋಗ, ಜೋಗ-ಶಿವಮೊಗ್ಗ ಹೀಗೆ ಮೂರು ವಿಭಾಗಗಳಾಗಿ ವಿಂಗಡಿಸಿ ಈ ವ್ಯಾಪ್ತಿಯಲ್ಲಿ ಬರುವ ಪ್ರದೇಶವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಭದ್ರತೆ ಮತ್ತು ಸೂಕ್ತ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ಗ್ರೀನ್ ಪೊಲೀಸರ ನೇಮಕ ಮಾಡಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳಿಗೂ ಈ ಸೌಲಭ್ಯ ವಿಸ್ತರಿಸಲಾಗುವುದು ಎಂದು ಹೇಳಿದರು.

ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ತಾಲ್ಲೂಕಿನ ಸಿಗಂದೂರು ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು ಹೊಳೆಬಾಗಿಲಿನಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿವಿಧ ಸೌಲಭ್ಯ ಕಲ್ಪಿಸಬೇಕು. ಹೊನ್ನೆಮರಡು ಬದಲು ಹೊಳೆಬಾಗಿನಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಬೇಕು ಎಂದು ವಿನಂತಿಸಿದರು.

ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಸ್ಥಳಗಳಾದ ಕೆಳದಿ, ಇಕ್ಕೇರಿಯ ಅಭಿವೃದ್ಧಿಗೂ ಪ್ರವಾಸೋದ್ಯಮ ಇಲಾಖೆ ಗಮನ ಹರಿಸಬೇಕು ಎಂದು  ಸಚಿವರಲ್ಲಿ ಮನವಿ ಮಾಡಿದರು. ಜಿಲ್ಲಾಧಿಕಾರಿ ವೇದಮೂರ್ತಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸಂಜಯ್ ಬಿಜ್ಜೂರು, ಉಪವಿಭಾಗಾಧಿಕಾರಿ ಡಾ.ಜಿ.ಎಲ್. ಪ್ರವೀಣ್‌ಕುಮಾರ್, ತಹಶೀಲ್ದಾರ್ ರಾಜಣ್ಣ ಹಾಜರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.