ADVERTISEMENT

ವಸತಿಗಾಗಿ ಅಕ್ರಮ ಹಣ ವಸೂಲಿ: ಆರೋಪ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2011, 8:55 IST
Last Updated 22 ಸೆಪ್ಟೆಂಬರ್ 2011, 8:55 IST

ಶಿವಮೊಗ್ಗ: ಇಂದಿರಾ ಆವಾಸ್ ವಸತಿ ಯೋಜನೆಯ ಫಲಾನುಭವಿಗಳಿಂದ ಅಕ್ರಮವಾಗಿ ್ಙ 10 ಸಾವಿರ ವಸೂಲಿ ಮಾಡಲಾಗುತ್ತಿದ್ದರೂ ತಾಲ್ಲೂಕು ಆಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಶಿವಮೊಗ್ಗ ತಾಲ್ಲೂಕು ಪಂಚಾಯ್ತಿ ಸದಸ್ಯರು ಪಕ್ಷಾತೀತವಾಗಿ ಆರೋಪಿಸಿದರು.

ನಗರದ ತಾಲ್ಲೂಕು ಪಂಚಾಯ್ತಿಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಇಂದಿರಾ ಆವಾಸ್ ಯೋಜನೆಯಲ್ಲಿನ ಅಕ್ರಮ ನಡೆದಿದೆ ಎಂದು ತಾಲ್ಲೂಕು ಪಂಚಾಯ್ತಿ ಸದಸ್ಯರು ಕಾರ್ಯ ನಿರ್ವಹಣಾಧಿಕಾರಿ ಸಿದ್ದಪ್ಪ ಅವರನ್ನು ತರಾಟೆಗೆ ತೆಗೆದುಕೊಂಡರು.

ಮನೆ ಇದ್ದವರಿಗೂ ಮನೆ ಮಂಜೂರು ಮಾಡಲಾಗುತ್ತಿದ್ದು, ನಿಜವಾದ ಫಲಾನುಭವಿಗಳಿಗೆ ಮನೆ ಸಿಗುತ್ತಿಲ್ಲ. ಇದರಲ್ಲಿ ಕೆಲ ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು ಶಾಮೀಲಾಗಿದ್ದಾರೆ ಎಂದು ತಾ.ಪಂ. ಸದಸ್ಯರು ಆರೋಪಿಸಿದರು.

ಇಂದಿರಾ ಆವಾಸ್ ವಸತಿ ಯೋಜನೆ ಅಡಿ ್ಙ 60 ಸಾವಿರ ಮಂಜೂರಾಗಿದೆ. ಆದರೆ, ಆದರಲ್ಲಿ ಅನರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ್ಙ 30 ಸಾವಿರ  ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ ಸದಸ್ಯರು, ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು ಅನೇಕ ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ ವರ್ಗಾವಣೆ ಮಾಡುತ್ತಿಲ್ಲ. ದೊಡ್ಡ ಪ್ರಮಾಣದಲ್ಲಿ ಅವ್ಯವಹಾರ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಸದಸ್ಯ ನಾಗರಾಜ್ ಮಾತನಾಡಿ, ತಾಲ್ಲೂಕಿನಲ್ಲಿ ಕೃತಕ ರಸಗೊಬ್ಬರ ಅಭಾವ ಸೃಷ್ಟಿಯಾಗಿದ್ದು, ಇದರಲ್ಲಿ ಗೊಬ್ಬರ ಮಾರಾಟಗಾರರು ಮತ್ತು ಅಧಿಕಾರಿಗಳು ಸಹ ಶಾಮೀಲಾಗಿದ್ದಾರೆ ಎಂದು ಆರೋಪಿಸಿದ ಅವರು, ಸರ್ಕಾರಿ ವಿದ್ಯಾರ್ಥಿ ವಸತಿನಿಲಯಗಳಲ್ಲಿ ಹಣ ದುರುಪಯೋಗವಾಗಿದೆ. ವಕೀಲರ ಗೌರವಧನ ಕೂಡಾ ಬಳಕೆಯಾಗದೇ ಹಿಂದಿರುಗಿದ್ದರೂ ಸಮಾಜ ಕಲ್ಯಾಣ ಇಲಾಖೆ ಮಾತ್ರ ಗಮನಹರಿಸಿಲ್ಲ ಎಂದು ಆರೋಪಿಸಿದರು.

ಸಭೆಯಲ್ಲಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಲಿಂಗರಾಜು, ಉಪಾಧ್ಯಕ್ಷೆ ಕಮಲಮ್ಮ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಸಿದ್ದಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.