ADVERTISEMENT

ಸರ್ಕಾರಿ ಶಾಲೆಗಳಲ್ಲಿ ಸಮಾನತೆಯ ಆಶಯ: ಕೆ.ವಿ.ಅಕ್ಷರ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2017, 10:45 IST
Last Updated 11 ಅಕ್ಟೋಬರ್ 2017, 10:45 IST

ಸಾಗರ: ಸಮಾಜದ ಎಲ್ಲಾ ವರ್ಗದ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಕಾಣುವುದರಿಂದ ಈ ಶಾಲೆಗಳಲ್ಲಷ್ಟೇ ಸಮಾನತೆಯ ಆಶಯ ಸಾಕಾರಗೊಳ್ಳಲು ಸಾಧ್ಯ ಎಂದು ರಂಗಕರ್ಮಿ ಕೆ.ವಿ.ಅಕ್ಷರ ಹೇಳಿದರು. ಸಮೀಪದ ಗಡಿಕಟ್ಟೆ ಗ್ರಾಮದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಶೈಲಜಾ ಎ.ಎಸ್‌. ಅವರನ್ನು ಸನ್ಮಾನಿಸಿ ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ನಿಗದಿತ ವಿದ್ಯಾರ್ಹತೆ ಪಡೆದಿರುವ ನುರಿತ ಶಿಕ್ಷಕರು ಇರುತ್ತಾರೆ. ಆದಾಗ್ಯೂ ಇತ್ತೀಚಿನ ವರ್ಷಗಳಲ್ಲಿ ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹ ಮಿತಿಮೀರುತ್ತಿದೆ. ಶೈಲಜಾ ಅವರು ಶಿಕ್ಷಕಿಯಾಗಿ ಅತ್ಯಂತ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಜೊತೆಗೆ ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದು, ಪ್ರಶಸ್ತಿಗೆ ಅರ್ಹರಾಗಿದ್ದಾರೆ ಎಂದರು.

ಶಿಕ್ಷಣ ಸಂಯೋಜಕ ರವೀಂದ್ರ ಮಾತನಾಡಿ, ‘ಗಡಿಕಟ್ಟೆ ಭಾಗದಲ್ಲಿ ಶಿಕ್ಷಣದಿಂದ ವಂಚಿತರಾಗಿದ್ದ ಅಲೆಮಾರಿ ಜನಾಂಗದ ಮಕ್ಕಳಿಗೆ ಶಿಕ್ಷಣ ಕೊಡಿಸಿ, ಅವರು ಮುಖ್ಯವಾಹಿನಿಗೆ ಬರುವಂತೆ ಮಾಡುವಲ್ಲಿ ಶಿಕ್ಷಕಿ ಶೈಲಜಾ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಕಾರಣಕ್ಕೆ ಪ್ರಶಸ್ತಿ ಅವರನ್ನು ಹುಡುಕಿಕೊಂಡು ಬಂದಿದೆ’ ಎಂದು ಹೇಳಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಂಗಾಧರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಎಚ್‌.ವಿ.ಚಂದ್ರಶೇಖರ್ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.