ADVERTISEMENT

ಸಾಲ ಮನ್ನಾಕ್ಕೆ ಆಗ್ರಹಿಸಿ ನ. 7ಕ್ಕೆ ಬಹಿರಂಗ ಸಭೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2017, 7:21 IST
Last Updated 22 ಅಕ್ಟೋಬರ್ 2017, 7:21 IST

ಶಿವಮೊಗ್ಗ: ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು, ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಮತ್ತು ರೈತ ಮಹಿಳೆಯರು ನ. 7ರಂದು ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಅಂದು ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರಿನ ಈದ್ಗಾ ಮೈದಾನದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸಭೆ ಉದ್ಘಾಟಿಸುವರು. ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎಂ. ಚಂದ್ರಪ್ಪ ಅಧ್ಯಕ್ಷತೆ ವಹಿಸುವರು ಎಂದು ಮಾಹಿತಿ ನೀಡಿದರು.
ರೈತರ ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗಬೇಕು. ಪ್ರತಿ ಬಜೆಟ್‌ಗಳಲ್ಲಿ 65 ಭಾಗ ಕೃಷಿ ಕ್ಷೇತ್ರಕ್ಕೆ ಮೀಸಲಿಡಬೇಕು. ರೈತರ  ಮಕ್ಕಳಿಗೆ ಉದ್ಯೋಗ ಮೀಸಲಾತಿ ನೀಡಬೇಕು.

ನಿರಂತರ ವಿದ್ಯುತ್, ನೀರಾವರಿ ಸೌಲಭ್ಯ ಕಲ್ಪಿಸಬೇಕು. ರೈತರ ಉತ್ಪನ್ನಗಳಿಗೆ ಡಾ.ಸ್ವಾಮಿನಾಥನ್ ವರದಿಯಂತೆ ಉತ್ಪಾದನೆ ವೆಚ್ಚದ ಜತೆ ಶೇ 50 ಲಾಭಾಂಶ ಘೋಷಣೆ ಮಾಡಬೇಕು. ಅಲ್ಲಿಯವರೆಗೆ ರೈತರ ಸಂಪೂರ್ಣ ಸಾಲದ ಹೊಣೆ ಸರ್ಕಾರಗಳು ಹೊರಬೇಕು ಎಂದು ಆಗ್ರಹಿಸಿ ರೈತರು ಅಂದು ಭರ್ತಿ ಮಾಡಿದ ಅರ್ಜಿ ಸಲ್ಲಿಸಲಿದ್ದಾರೆ ಎಂದು ವಿವರ ನೀಡಿದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ರೈತ ಮುಖಂಡ ಕಡಿದಾಳ್ ಶಾಮಣ್ಣ, ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎಂ. ಚಂದ್ರಪ್ಪ, ಡಿ.ಎಚ್. ರಾಮಚಂದ್ರಪ್ಪ, ಎಸ್. ಶಿವಮೂರ್ತಿ, ಕೆ. ರಾಘವೇಂದ್ರ, ಪಂಚಾಕ್ಷರಪ್ಪ, ಡಾ.ಬಿ.ಎಂ.ಚಿಕ್ಕಸ್ವಾಮಿ, ಹಿಟ್ಟೂರು ರಾಜು, ಇ.ಬಿ. ಜಗದೀಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.