ಶಿವಮೊಗ್ಗ: ಕೇಂದ್ರ ಸರ್ಕಾರದಿಂದ ಕೃಷಿಗಾಗಿ ಪ್ರತ್ಯೇಕ ಬಜೆಟ್ ರೂಪಿಸಬೇಕು. ಡಾ.ಸ್ವಾಮಿನಾಥನ್ ವರದಿಗೆ ಕಾಯ್ದೆಯ ಸ್ವರೂಪ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ರೈತ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರ ರೈತರ ಬಗ್ಗೆ ನಿರ್ಲಕ್ಷ ಧೋರಣೆ ಹೊಂದಿದೆ. ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ನಡೆದ ಹೋರಾಟದಲ್ಲಿ ಸುಮಾರು 736 ರೈತರು ಹುತಾತ್ಮರಾಗಿದ್ದಾರೆ. ರೈತರಿಗೆ ಸಂಬಂಧಿಸಿದಂತೆ ಅನೇಕ ಜ್ವಲಂತ ಸಮಸ್ಯೆಗಳಿವೆ. ಲೋಕಸಭೆ ಅಧಿವೇಶನದಲ್ಲಿ ಅವುಗಳತ್ತ ಗಮನಹರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ರೈತರ ಆತ್ಮಹತ್ಯೆ ತಪ್ಪಿಸಬೇಕು. ಕೃಷಿ ಕ್ಷೇತ್ರದಲ್ಲಿ ಖಾಸಗೀಕರಣ ನಿಲ್ಲಿಸಬೇಕು. ರೈತರು ಕೃಷಿ ಕಾರ್ಮಿಕರಿಗೆ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು. ಭೂಸ್ವಾಧೀನ ಮತ್ತು ಪರಿಹಾರ ಪುನರ್ವಸತಿ ಕಾಯ್ದೆ ಪರಿಷ್ಕರಣೆ ಮಾಡಬೇಕು. ರೈತರ ಜೀವ ಹಾನಿಗೆ ನೀಡುವ ಪರಿಹಾರ ಮೊತ್ತ ₹1 ಕೋಟಿಗೆ ಏರಿಸಬೇಕು. ಕೃಷಿಯನ್ನು ಖಾಸಗೀಕರಣ ಗೊಳಿಸಬಾರದು. ಜಿಎಸ್ಟಿ ಕಾಯ್ದೆಗೆ ತಿದ್ದುಪಡಿ ತರಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಕೆ. ರಾಘವೇಂದ್ರ, ಟಿ.ಎಂ. ಚಂದ್ರಪ್ಪ, ಹಿಟ್ಟೂರು ರಾಜು, ಎಂ.ಡಿ. ನಾಗರಾಜ್, ಸಿ. ಚಂದ್ರಪ್ಪ, ಕಸೆಟ್ಟಿ ರುದ್ರೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.