ADVERTISEMENT

ಅಂಬೇಡ್ಕರ್ ಜಯಂತಿ | ಸಂವಿಧಾನ ಸರ್ವ ಶ್ರೇಷ್ಠ ಗ್ರಂಥ: ಕೆ.ಎಸ್. ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2022, 4:57 IST
Last Updated 15 ಏಪ್ರಿಲ್ 2022, 4:57 IST
ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 131ನೇ ಜಯಂತಿ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 131ನೇ ಜಯಂತಿ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.   

ಶಿವಮೊಗ್ಗ: ಎಲ್ಲ ಧರ್ಮಗಳಲ್ಲಿ ಅವರದ್ದೇ ಆದ ಧರ್ಮ ಗ್ರಂಥಗಳಿರುತ್ತವೆ. ಆದರೆ ಎಲ್ಲಾ ಭಾರತೀಯರಿಗೂ ಸರ್ವ ಶ್ರೇಷ್ಠ ಗ್ರಂಥ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ಇಲ್ಲಿನ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 131ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವ್ಯಕ್ತಿ ಹುಟ್ಟಿನಿಂದ ಸಾಯುವವರೆಗೂ ಸಮಾಜದಲ್ಲಿ ಸಂರಕ್ಷೆ ಕೊಡಬೇಕು ಎಂಬುದನ್ನು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ತಿಳಿಸಿದ್ದಾರೆ. ಅಂಬೇಡ್ಕರ್ ನೀಡಿರುವ ಮೂರು ಮಂತ್ರಗಳಾದ ಶಿಕ್ಷಣ ಸಂಘಟನೆ ಮತ್ತು ಹೋರಾಟಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರು ತೋರಿದ ಆದರ್ಶ ಮಾರ್ಗದಲ್ಲಿ ಎಲ್ಲರೂ ನಡೆಯಬೇಕು ಎಂದರು.

ADVERTISEMENT

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಕೆ.ಬಿ. ಅಶೋಕ್ ನಾಯ್ಕ್ ಮಾತನಾಡಿ, ‘ಅಸ್ಪೃಶ್ಯತೆ, ಅಸಮಾನತೆ, ಹಿಂಸೆಗಳನ್ನು ಮೆಟ್ಟಿ ನಿಂತು, ಶೋಷಣೆಗೆ ಒಳಗಾದವರನ್ನು ಮುಖ್ಯವಾಹಿನಿಗೆ ತಂದವರು ಅಂಬೇಡ್ಕರ್’ ಎಂದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪಿಯುಸಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ನೀಡಿ ಗೌರವಿಸಲಾಯಿತು.

ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಡಾ.ಬಿ.ಆರ್.ಅಂಬೇಡ್ಕರ್‌ ಭಾವಚಿತ್ರದ ಮೆರವಣಿಗೆ ಜಾನಪದ ಕಲಾ ತಂಡಗಳೊಂದಿಗೆ ನಡೆಯಿತು. ಮಹಾನಗರ ಪಾಲಿಕೆಯಿಂದ ಪ್ರಾರಂಭವಾಗಿ ಡಿವಿಎಸ್ ಸರ್ಕಲ್ ಮೂಲಕ ಅಮೀರ್ ಅಹಮ್ಮದ್‌ ವೃತ್ತ, ಶೀನಪ್ಪ ಶೆಟ್ಟಿ ವೃತ್ತ, ಮಹಾವೀರ ವೃತ್ತ ಮೂಲಕ ಕುವೆಂಪು ರಂಗಮಂದಿರಕ್ಕೆ ಮೆರವಣಿಗೆ ತಲುಪಿತು.

ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಜಿಲ್ಲಾಧಿಕಾರಿ ಆರ್. ಸೆಲ್ವಮಣಿ, ಸಿಇಒ ಎಂ.ಎಲ್. ವೈಶಾಲಿ, ಶಿವಮೊಗ್ಗ-ಭದ್ರಾವತಿ ನಗರಾಭವೃಧ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗರಾಜ್, ಮಹಾನಗರ ಪಾಲಿಕೆಯ ಸದಸ್ಯರಾದ ಪ್ರಭಾಕರ್, ವಿಶ್ವಾಸ್, ಸತ್ಯನಾರಾಯಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.