ರಿಪ್ಪನ್‌ಪೇಟೆ: ಸಮೀಪದ ಅಮೃತ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಆಶ್ರಯದಲ್ಲಿ ಭಾನುವಾರ ಬೃಹತ್ ಸ್ನೇಹ ಸಮ್ಮಿಲನ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಸರ್ಕಾರಿ ಶಾಲಾ ಆಟದ ಮೈದಾನವು ತಳಿರು, ತೋರಣಗಳಿಂದ ಸಿಂಗಾರಗೊಂಡಿದೆ.
ಅಮೃತ ಗ್ರಾಮವು ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ, ಕೃಷಿ ಕ್ಷೇತ್ರಗಳಲ್ಲಿ ಛಾಪು ಮೂಡಿಸಿದೆ. ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದಿ ಉತ್ತಮ ಭವಿಷ್ಯ ರೂಪಿಸಿಕೊಂಡಿರುವ ಹಳೆಯ ವಿದ್ಯಾರ್ಥಿಗಳು ತಮಗೆ ಅಕ್ಷರ ಕಲಿಸಿದ ಗುರುಗಳೂ, ಜ್ಞಾನದೇಗುಲವನ್ನೂ ಕಾಣಲು ಬರಲಿದ್ದಾರೆ. ಹಳೆಯ ವಿದ್ಯಾರ್ಥಿಗಳ ಸಮ್ಮಿಲನಕ್ಕೆ ಗ್ರಾಮದ ಶಾಲೆಯ ಆವರಣ ಕಂಗೊಳಿಸುತ್ತಿದ್ದು, ಸಡಗರ, ಸಂಭ್ರಮ ಮನೆಮಾಡಿದೆ.
ಬ್ರಹ್ಮಶ್ರೀ ನಾರಾಯಣಗುರು ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ರೇಣುಕಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಭಾನುವಾರ ಬೆಳಿಗ್ಗೆ 9.30ಕ್ಕೆ ‘ಅಮೃತ ಸ್ನೇಹ ಸಮ್ಮಿಲನ’ ವಿದ್ಯಾರ್ಥಿಗಳ ಪುನರ್ಮಿಲನ ಮತ್ತು ಶಿಕ್ಷಕರ ಸಮಾಗಮ ನಡೆಯಲಿದೆ.
ಸಭಾ ಕಾರ್ಯಕ್ರಮವನ್ನು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಲಿದ್ದಾರೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಗುರುವಂದನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ ಅಮೃತ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಲಿದ್ದಾರೆ.
ಮಾಜಿ ಶಾಸಕರಾದ ಡಾ.ಜಿ.ಡಿ. ನಾರಾಯಣಪ್ಪ, ಬಿ.ಸ್ವಾಮಿರಾವ್, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಜಿ.ಪಂ.ಮಾಜಿ ಸದಸ್ಯ ರಾಮಚಂದ್ರ ಬಂಡಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ಭಾಗವಹಿಸಲಿದ್ದಾರೆ.
ಸಂಜೆ 4ಕ್ಕೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ ಸಚಿನ್ ಗೌಡ ವಹಿಸುವರು. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಗೋಪಾಲಕೃಷ್ಣ ಬೇಳೂರು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಭಾಗವಹಿಸುವರು.
ಸಂಜೆ 6 ಗಂಟೆಗೆ ಸಮನ್ವಯ ತಂಡದ ಅಂತರಾಷ್ಟ್ರೀಯ ಮಟ್ಟದ ಕಲಾವಿದರಿಂದ ನೃತ್ಯ, ಸಂಗೀತ, ಹರಟೆ ಕಾರ್ಯಕ್ರಮ, ಹಾಸ್ಯೋತ್ಸವ ಜರುಗಲಿದೆ ಎಂದು ಹಿರಿಯ ವಿದ್ಯಾರ್ಥಿಗಳ ಸಂಘದ ಸದಸ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.