
ಶಿವಮೊಗ್ಗ: ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ನಿವೇಶನ ಗುರುತಿಸುವಂತೆ ಹಾಗೂ ಅಮೃತ ನಗರೋತ್ಥಾನ ಯೋಜನೆಯಡಿ ಮಂಜೂರಾದ ಅಂಗನವಾಡಿಗಳ ಕಟ್ಟಡ ಕಾಮಗಾರಿ ಮಾರ್ಚ್ ಒಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಸಮನ್ವಯ ಸಮಿತಿ ಹಾಗೂ ಮಕ್ಕಳ ರಕ್ಷಣಾ ಘಟಕದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಜಿಲ್ಲೆಯಲ್ಲಿ ಒಟ್ಟು 2,563 ಅಂಗನವಾಡಿ ಕೇಂದ್ರಗಳಿದ್ದು, 2,065 ಸ್ವಂತ ಕಟ್ಟಡದಲ್ಲಿ, 106 ಶಾಲಾ ಕಟ್ಟಡದಲ್ಲಿ, 96 ಇತರೆ ಕಟ್ಟಡದಲ್ಲಿ ಮತ್ತು 296 ಬಾಡಿಗೆ ಕಟ್ಟಡದಲ್ಲಿವೆ. ನಗರದಲ್ಲಿ 180 ಮತ್ತು ಗ್ರಾಮೀಣ ಭಾಗದಲ್ಲಿ 70 ನಿವೇಶನಗಳ ಅವಶ್ಯಕತೆ ಇದ್ದು, ಆಯಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳನ್ನು ಗುರುತಿಸಿ, ಸ್ವಂತ ಕಟ್ಟಡ ನಿರ್ಮಿಸಲು ಕ್ರಮ ವಹಿಸಬೇಕು. ಶಿವಮೊಗ್ಗ ನಗರದಲ್ಲಿ ಆದ್ಯತೆ ಮೇರೆಗೆ ನಿವೇಶನ ಗುರುತಿಸುವ ಕೆಲಸವಾಗಬೇಕು’ ಎಂದು ಸಿಡಿಪಿಒಗಳಿಗೆ ಸೂಚಿಸಿದರು.
ಅಮೃತ ನಗರೋತ್ಥಾನ ಯೋಜನೆಯಡಿ ಏಳು ತಾಲ್ಲೂಕುಗಳಿಗೆ ಮಂಜೂರಾಗಿರುವ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾರ್ಯ ವಿವಿಧ ಹಂತದಲ್ಲಿದ್ದು, ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು.
‘ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ ಮತ್ತು ನೆರವು, ಪೊಲೀಸ್ ನೆರವು, ಕಾನೂನು ನೆರವು, ಸಮಾಲೋಚನೆ ಮತ್ತು ತಾತ್ಕಾಲಿಕ ಆಶ್ರಯ ವ್ಯವಸ್ಥೆ ನೀಡಲಾಗುತ್ತದೆ. ಪ್ರಸ್ತುತ 177 ಪ್ರಕರಣಗಳಿದ್ದು, ಕೇಂದ್ರದಲ್ಲಿ ನೀಡಬೇಕಾದ ಸೇವೆಗಳನ್ನು ಸಕಾಲದಲ್ಲಿ ಒದಗಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು’ ಎಂದು ತಿಳಿಸಿದರು.
ರಾಜ್ಯ ಮಹಿಳಾ ನಿಲಯದಲ್ಲಿ ಪ್ರಸ್ತುತ 59 ಮಾನಸಿಕ ಅಸ್ವಸ್ಥ ಮತ್ತು 14 ಬುದ್ಧಿಮಾಂದ್ಯ ಸೇರಿ ಒಟ್ಟು 73 ನಿವಾಸಿಗಳಿದ್ದು, ಅವರಿಗೆ ಆರೈಕೆ, ಆಹಾರ, ಸಮಾಲೋಚನೆ, ವೈದ್ಯಕೀಯ ನೆರವಿನೊಂದಿಗೆ ಕೌಶಲ ತರಬೇತಿಯನ್ನು ಸಮರ್ಪಕವಾಗಿ ನೀಡಬೇಕು ಎಂದು ಸೂಚಿಸಿದರು.
‘ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ 262, ತಾಲ್ಲೂಕು ಮಟ್ಟದಲ್ಲಿ ಏಳು ಮತ್ತು ಜಿಲ್ಲಾ ಮಟ್ಟದಲ್ಲಿ ಒಂದು ಕಾವಲು ಸಮಿತಿ ರಚಿಸಲಾಗಿದೆ. ಉದ್ಯೋಗಿನಿ, ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಸಹಾಯಧನ ಯೋಜನೆಯಡಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಶೀಲಿಸಿ ನಿಗದಿತ ಅವಧಿಯೊಳಗೆ ಅವರಿಗೆ ಸೌಲಭ್ಯ ಒದಗಿಸಬೇಕು’ ಎಂದು ತಿಳಿಸಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸಂತೋಷ್, ಎಸ್ಪಿ ಬಿ.ನಿಖಿಲ್, ಎಡಿಸಿ ವಿ.ಅಭಿಷೇಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಡಿಸಿಪಿಒ ಮಂಜುನಾಥ್, ಸಿಡಬ್ಲ್ಯುಸಿ ಅಧ್ಯಕ್ಷ ತಾಜುದ್ದೀನ್ ಖಾನ್ ಹಾಜರಿದ್ದರು.
ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 50 ಮಕ್ಕಳಿದ್ದು ಪೋಷಕರ ಮನವೊಲಿಸಿ ಎಲ್ಲರಿಗೂ ಕಡ್ಡಾಯವಾಗಿ ಎನ್‌ಆರ್‌ಸಿ (ನ್ಯುಟ್ರಿಷನ್ ರಿಹ್ಯಾಬಿಲಿಟೇಷನ್ ಸೆಂಟರ್) ಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕುಎನ್. ಹೇಮಂತ್ ಜಿ.ಪಂ. ಸಿಇಒ
ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಜಿಲ್ಲೆಯಲ್ಲಿ ನಡೆದ 19 ಬಾಲ್ಯ ವಿವಾಹಗಳಿಗೆ ಎಫ್‌ಐಆರ್ ದಾಖಲಿಸಿ ಕ್ರಮ ವಹಿಸಲಾಗಿದ್ದು 16 ಬಾಲ್ಯ ವಿವಾಹಗಳನ್ನು ತಡೆಗಟ್ಟಲಾಗಿದೆ. 73 ಪೋಕ್ಸೊ ಪ್ರಕರಣ ದಾಖಲಿಸಲಾಗಿವೆಪ್ರಭುಲಿಂಗ ಕವಳಿಕಟ್ಟಿ ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.