ADVERTISEMENT

ಕುಡಿಯುವ ನೀರಿನ 87 ಕಾಮಗಾರಿಗಳಿಗೆ ಅನುಮೋದನೆ

ಕಾಮಗಾರಿ ಕ್ರಿಯಾ ಯೋಜನೆ: ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಅಧ್ಯಕ್ಷತೆಯಲ್ಲಿ ಸಭೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2020, 17:33 IST
Last Updated 20 ಏಪ್ರಿಲ್ 2020, 17:33 IST
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಕುಡಿಯುವ ನೀರಿನ ಕಾಮಗಾರಿಗಳ ಕ್ರಿಯಾ ಯೋಜನೆಯ ಅನುಷ್ಠಾನಕ್ಕಾಗಿ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಕುಡಿಯುವ ನೀರಿನ ಕಾಮಗಾರಿಗಳ ಕ್ರಿಯಾ ಯೋಜನೆಯ ಅನುಷ್ಠಾನಕ್ಕಾಗಿ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು   

ಶಿವಮೊಗ್ಗ: ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಪ್ರಸ್ತಾವಿತ ಕುಡಿಯುವ ನೀರಿನ 1.38 ಕೋಟಿ ಮೊತ್ತದ 87 ಕಾಮಗಾರಿಗಳಿಗೆ ಜಿಲ್ಲಾ ಮಟ್ಟದ ಸಮಿತಿ ಅನುಮೋದನೆ ನೀಡಿದೆ.

ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗವು ಸೋಮವಾರ ಏರ್ಪಡಿಸಿದ್ದ ತುರ್ತು ಕುಡಿಯುವ ನೀರಿನ ಕಾಮಗಾರಿಗಳ ಕ್ರಿಯಾ ಯೋಜನೆಯ ಅನುಷ್ಠಾನಕ್ಕಾಗಿ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್. ವೈಶಾಲಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ದೊರೆತಿದೆ.

ರಾಜ್ಯದ ಬರ ಪೀಡಿತವಲ್ಲದ ಪ್ರತಿ ತಾಲ್ಲೂಕಿಗೆ ಸರ್ಕಾರವು ಈಗಾಗಲೇ ಘೋಷಿಸಿರುವಂತೆ ₹ 25 ಲಕ್ಷ ಮಂಜೂರು ಮಾಡಿದ್ದು, ಎರಡು ಹಂತಗಳಲ್ಲಿ ಈಗಾಗಲೇ ಪ್ರತಿ ತಾಲ್ಲೂಕಿಗೆ ₹ 20 ಲಕ್ಷ ಅನುದಾನ ಬಿಡುಗಡೆ ಮಾಡಿದೆ ಎಂದರು.

ADVERTISEMENT

ಈ ಪೈಕಿ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯುವ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಅನುಮೋದನೆಗೊಂಡ ಕಾಮಗಾರಿಗಳಿಗೆ ಜಿಲ್ಲಾ ಮಟ್ಟದ ಸಮಿತಿ ಅನುಮೋದನೆ ನೀಡಲಿದೆ. ಅಲ್ಲದೆ ಉಳಿದ ₹ 5 ಲಕ್ಷ ಅನುದಾನವನ್ನು ಜಿಲ್ಲಾ ಪಂಚಾಯಿತಿ ಸಿಇಒ ತಮ್ಮ ವಿವೇಚನೆಯಂತೆ ಬಳಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಪ್ರಸಕ್ತ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಎಲ್ಲಿಯೂ ಕುಡಿಯುವ ನೀರು ಸರಬರಾಜಿಗೆ ಅಡಚಣೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅತಿ ಅಗತ್ಯವೆನಿಸುವ, ತೀವ್ರ ಪ್ರಮಾಣದ ಸಮಸ್ಯಾತ್ಮಕ ಹಾಗೂ ಸಾರ್ವಜನಿಕರಿಗೆ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗಬಹುದಾದ ಗ್ರಾಮದ ಪ್ರಮುಖ ಪ್ರದೇಶಗಳಲ್ಲಿ ಕೊಳವೆಬಾವಿಗಳನ್ನು ಕೊರೆಸಲು ಸ್ಥಳಗಳನ್ನು ಗುರುತಿಸಬೇಕು. ಆಯಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಅನುಮತಿ ಪತ್ರವನ್ನು ಪಡೆಯುವಂತೆಯೂ ಸೂಚಿಸಿದರು.

ಈಗಾಗಲೇ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕುಡಿಯುವ ನೀರಿನ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಿ, ವರ್ಷವಿಡೀ ನೀರು ಸರಬರಾಜು ಆಗುವಂತೆ ನೋಡಿಕೊಳ್ಳಬೇಕು. ಅಲ್ಲದೇ ಮುಂದಿನ ವರ್ಷಗಳಲ್ಲಿ ಎದುರಾಗಬಹುದಾದ ಸಮಸ್ಯೆಗಳಿಗೆ ಪೂರಕವಾಗಿ ಕೇಂದ್ರ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ ಮನೆ ಮನೆಗೂ ಹಂತ ಹಂತವಾಗಿ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶ್ರೀಧರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಜಿ.ಎನ್. ಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಕಿರಣ್‍ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಂ. ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.