ADVERTISEMENT

ಹಲ್ಲೆ ಪ್ರಕರಣ: 62 ಮಂದಿ ಪೊಲೀಸ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 12:34 IST
Last Updated 4 ಡಿಸೆಂಬರ್ 2020, 12:34 IST

ಶಿವಮೊಗ್ಗ: ಹಲ್ಲೆ ಘಟನೆಯ ನಂತರ ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ 62 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೂರ್ವ ವಲಯ ಐಜಿಪಿ ಎಸ್‌.ರವಿ ಹೇಳಿದರು.

ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಘರ್ಷಣೆಯಲ್ಲಿ ಗಾಯಗೊಂಡ 19 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ನಿಗಾ ವಹಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ನೆರೆ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಕರೆಸಲಾಗಿದೆ. 148 ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿದ್ದು, ಬಿಗಿ ಪಹರೆ ಹಾಕಲಾಗಿದೆ. 9 ಚೆಕ್‌ ಪೋಸ್ಟ್‌ಗಳನ್ನು ತೆರೆದು ಹೊರಗಿನಿಂದ ಬರುವವರ ಮೇಲೆ ನಿಗಾ ಇರಿಸಲಾಗಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

22 ಚೀತಾ, 3 ಗಸ್ತು ಸಂಚಾರಿ ವಾಹನಗಳು, ಹಲವು ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದರು.

ADVERTISEMENT

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ. ಮುಂಜಾಗರೂಕತಾ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹಾಲು, ಔಷಧಿ ಮತ್ತಿತರ ಅಗತ್ಯ ಸಾಮಾಗ್ರಿಗಳ ಪೂರೈಕೆಗೆ ಅವಕಾಶ ಕಲ್ಪಿಸಲಾಗಿದೆ. ಜನರು ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಎಚ್ಚರಿಸಿದರು.

ಸಾರ್ವಜನಿಕರಿಗೆ ಭೀತಿ ಹುಟ್ಟಿಸುವ, ಯಾವುದೇ ವರ್ಗ, ಸಮುದಾಯದ ವಿರುದ್ಧ ಅಪರಾಧ ಮಾಡುವಂತೆ ಪ್ರಚೋದಿಸುವ ಬರಹಗಳನ್ನು ವಾಟ್ಸಾಪ್, ಫೇಸ್‍ಬುಕ್ ಮತ್ತಿತರ ಸಾಮಾಜಿಕ ಜಾಲತಾಣದಲ್ಲಿ ಹರಡುವುದು ಶಿಕ್ಷಾರ್ಹ ಅಪರಾಧ. ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.