ADVERTISEMENT

ಬಾಕಿ ವೇತನ ನೀಡದಿದ್ದರೆ ಸರ್ಕಾರ ವಿರುದ್ಧ ಧ್ವನಿ: ಆಯನೂರು ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 17:50 IST
Last Updated 19 ಸೆಪ್ಟೆಂಬರ್ 2020, 17:50 IST
ಆಯನೂರು ಮಂಜುನಾಥ್
ಆಯನೂರು ಮಂಜುನಾಥ್   

ಶಿವಮೊಗ್ಗ: ‘ಅತಿಥಿ ಉಪನ್ಯಾಸಕರಿಗೆ ಬಾಕಿ ವೇತನವನ್ನು ಶೀಘ್ರವೇ ಬಿಡುಗಡೆ ಮಾಡದಿದ್ದರೆಆಡಳಿತ ಪಕ್ಷದ ಶಾಸಕನಾಗಿ ಸದನದಲ್ಲಿ ಉನ್ನತ ಶಿಕ್ಷಣ ಸಚಿವರ ವಿರುದ್ಧ ಧ್ವನಿಯೆತ್ತಬೇಕಾಗುತ್ತದೆ’ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಎಚ್ಚರಿಕೆ ನೀಡಿದರು.

‘ಮಾರ್ಚ್ ತಿಂಗಳಿಂದ ಇದುವರೆಗೂ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ವೇತನ ಬಿಡುಗಡೆ ಮಾಡಿಲ್ಲ. ಲಾಕ್‌ಡೌನ್ ಸಂದರ್ಭದಲ್ಲಿ ವೇತನ ಸಿಗದೆ ಜೀವನ ನಿರ್ವಹಣೆಗೆ ಸಂಕಷ್ಟಕ್ಕೀಡಾಗಿ ನಾಲ್ವರು ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ, ಅನಾರೋಗ್ಯಕ್ಕೆ ತುತ್ತಾಗಿ 18 ಉಪನ್ಯಾಸಕರು ಮೃತಪಟ್ಟಿದ್ದಾರೆ. ಉನ್ನತ ಶಿಕ್ಷಣ ಪಡೆದವರು ಒಂದು ಹೊತ್ತಿನ ಊಟಕ್ಕಾಗಿ ಪರದಾಡುವಂತಹ ಸಂದರ್ಭ ಬಂದಿದೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

‘ಕೇಂದ್ರ ಸರ್ಕಾರ ಜುಲೈವರೆಗೆ ವೇತನ ಬಿಡುಗಡೆ ಮಾಡುವಂತೆ ಸೂಚಿಸಿದ್ದರೂ ರಾಜ್ಯ ಸರ್ಕಾರ ಇದನ್ನು ಪಾಲಿಸಿಲ್ಲ. ವೇತನ ಸಿಗದೆ ಅತಿಥಿ ಉಪನ್ಯಾಸಕರು ಕೂಲಿ ಕೆಲಸ, ಹಣ್ಣು ಮಾರಾಟ ಸೇರಿ ಇತರೆ ಕೆಲಸಗಳನ್ನು ಮಾಡುತ್ತಿದ್ದಾರೆ. ಸರ್ಕಾರ ಇವರ ಬಗ್ಗೆ ಗಮನಹರಿಸುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅತಿಥಿ ಉಪನ್ಯಾಸಕರ ಸಮಸ್ಯೆಗೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವರನ್ನು ಕರೆಸಿ, ಬುದ್ಧಿವಾದ ಹೇಳಿ ವೇತನ ಬಿಡುಗಡೆ ಮಾಡುವಂತೆ ಸೂಚಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.