ಸಾಗರ: ‘ನನ್ನ ರಾಜಕೀಯದ ಅನುಭವದ ಪ್ರಕಾರ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಹಾಲಪ್ಪ ಹರತಾಳು ಸ್ಪಷ್ಟಪಡಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷರ ಆಯ್ಕೆಯ ವಿಷಯ ಬಂದಾಗ ಬಹುಮತಕ್ಕಿಂತ ಸಹಮತ ಹೆಚ್ಚು ಪ್ರಾಮುಖ್ಯ ಪಡೆಯುತ್ತದೆ’ ಎಂದು ತಿಳಿಸಿದರು.
‘ಪಕ್ಷದ ಎಲ್ಲ ಬೆಳವಣಿಗೆಗಳನ್ನು ಹೈಕಮಾಂಡ್ ಸೂಕ್ಷ್ಮವಾಗಿ ಗಮನಿಸುತ್ತಿದೆ. ರಾಜ್ಯ ಘಟಕದ ಅಧ್ಯಕ್ಷರ ಆಯ್ಕೆ ವಿಷಯದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಈ ಬಗ್ಗೆ ಹಾದಿ ಬೀದಿಯಲ್ಲಿ ಮಾತನಾಡುವುದಕ್ಕಿಂತ ಪಕ್ಷದ ವೇದಿಕೆಯಲ್ಲಿ ಅಭಿಪ್ರಾಯ ಮಂಡಿಸುವುದು ಸೂಕ್ತ’ ಎಂದರು.
‘ಬಿಜೆಪಿ ಮುಖಂಡ ಬಸವರಾಜ ಪಾಟೀಲ್ ಯತ್ನಾಳ್ ಅವರ ಭಾಷೆಯೇ ಸರಿ ಇಲ್ಲ. ಏನು ಮಾತನಾಡುತ್ತೇನೆ ಎಂಬ ಅರಿವಿಲ್ಲದೆ ಅವರು ಮಾತನಾಡುತ್ತಾರೆ. ಅವರ ಹೇಳಿಕೆಗಳಿಂದ ಪಕ್ಷದ ಕಾರ್ಯಕರ್ತರು ಮುಜುಗರ ಅನುಭವಿಸುವಂತಾಗಿದೆ’ ಎಂದು ಹೇಳಿದರು.
‘ವಿಜಯೇಂದ್ರ ಅವರು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೋಗಿದ್ದಾರೆ. ಪಕ್ಷದ ಕೆಲವು ಮುಖಂಡರು ಕೇಂದ್ರ ಸಚಿವ ವಿ.ಸೋಮಣ್ಣ ಅವರ ದೆಹಲಿಯಲ್ಲಿನ ನೂತನ ವಸತಿ ಕಚೇರಿ ಉದ್ಘಾಟನೆಗೆ ತೆರಳಿದ್ದಾರೆ. ರಾಜ್ಯ ಘಟಕದ ಅಧ್ಯಕ್ಷ ಆಯ್ಕೆಗೆ ಸಂಬಂಧಿಸಿದಂತೆ ಹೈಕಮಾಂಡ್ ಯಾರನ್ನೂ ದೆಹಲಿಗೆ ಕರೆದಿಲ್ಲ’ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯ ಪ್ರಮುಖರಾದ ಟಿ.ಡಿ.ಮೇಘರಾಜ್, ದೇವೇಂದ್ರಪ್ಪ ಯಲಕುಂದ್ಲಿ, ಕೆ.ಆರ್.ಗಣೇಶ್ ಪ್ರಸಾದ್, ಬಿ.ಟಿ.ರವೀಂದ್ರ, ವಿನಾಯಕ ರಾವ್ ಮನೆಘಟ್ಟ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.