ಶಿವಮೊಗ್ಗ: ಒಳಮೀಸಲಾತಿ ವರ್ಗೀಕರಣ ವಿರೋಧಿಸಿ,ಇಂದಿನಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಬಂಜಾರ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಬಂಜಾರ ಸಂಘ, ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ವಿವಿಧ ಸಂಘ–ಸಂಸ್ಥೆಗಳ ಆಶ್ರಯದಲ್ಲಿ ಸೆ.20ರವರೆಗೆ ಪ್ರತಿಭಟನೆ ಆಯೋಜಿಸಿದೆ. ಪ್ರತಿದಿನ ಬೇರೆ ಬೇರೆ ತಾಂಡಾಗಳ ಮುಖ್ಯಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆಗಲೂ ನಮ್ಮ ಬೇಡಿಕೆ ಈಡೇರದಿದ್ದರೆ ವಿಧಾನಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ನಿಗದಿಗೆ ರಚನೆಯಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಆಯೋಗ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ಹಲವು ಬದಲಾವಣೆಗಳನ್ನು ಮಾಡಿ ಸರ್ಕಾರ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
ಸ್ಪೃಶ್ಯ–ಅಸ್ಪೃಶ್ಯ ಅಸಂವಿಧಾನಿಕ ಪದಗಳು. ಅವುಗಳ ಬದಲಿಗೆ ದಮನಿತ ಅಥವಾ ವಿಮುಕ್ತ ಜಾತಿಗಳೆಂದು ಹೆಸರಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಿ,`ಸಿ’ ವರ್ಗದವರಿಗೂ ಶೇ.6ರಷ್ಟು ಮೀಸಲಾತಿ ನೀಡಬೇಕು. ಅಲೆಮಾರಿಗಳಿಗೆ ಪ್ರತ್ಯೇಕವಾಗಿ ಶೇ.1ರಷ್ಟು ಮೀಸಲಾತಿ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ಪ್ರಮುಖರಾದ ನಾನ್ಯಾನಾಯ್ಕ, ನಾಗೇಶ್‌ನಾಯ್ಕ, ಟಾಕ್ಯಾನಾಯ್ಕ, ಆನಂದ್, ವಾಸುದೇವ ನಾಯ್ಕ, ಮಂಜುನಾಥ್ ನಾಯ್ಕ, ಯಂಕ್ಟಾನಾಯ್ಕ ಇದ್ದರು.
ಮೀಸಲಾತಿ ಭಿಕ್ಷೆಯಲ್ಲ ಅದು ನಮ್ಮ ಹಕ್ಕು. ಸಮುದಾಯ ಸಂಘಟನೆಯಾಗಿ ಹೋರಾಟ ಮಾಡಬೇಕಾಗಿದೆ. ಇದಕ್ಕಾಗಿ ಎಲ್ಲರೂ ಸಜ್ಜಾಗಬೇಕುಕೆ.ಬಿ.ಅಶೋಕ ನಾಯ್ಕ ಮಾಜಿ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.