
ಶಿವಮೊಗ್ಗ: ‘ಪ್ರಸಕ್ತ ಸಾಲಿನ ಶ್ರೀ ಭಗವದ್ಗೀತಾ ಅಭಿಯಾನ ಕಾರ್ಯಕ್ರಮಕ್ಕೆ ಅ. 25ರಂದು ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಏಕಕಾಲದಲ್ಲಿ ಚಾಲನೆ ನೀಡಲಾಗುತ್ತಿದೆ’ ಎಂದು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಮಠದ ಜಗದ್ಗುರು ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ತಿಳಿಸಿದರು.
‘ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಮತ್ತು ಸ್ವರ್ಣರಶ್ಮೀ ಟ್ರಸ್ಟ್‌ನ ಸಂಯುಕ್ತಾಶ್ರಯದಲ್ಲಿ ಈ ಅಭಿಯಾನ ನಡೆಯುತ್ತಿದೆ. ಅಭಿಯಾನದ ಉದ್ಘಾಟನೆಗೆ ಸಕಲ ಸಿದ್ಧತೆ ಪೂರ್ಣಗೊಂಡಿವೆ’ ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಶಿವಮೊಗ್ಗ ಜಿಲ್ಲೆಯ 157, ರಾಜ್ಯದ ಇತರೆ 337 ಸ್ಥಳಗಳಲ್ಲಿ ಅಂದು ಉದ್ಘಾಟನಾ ಸಮಾರಂಭ ನಡೆಯಲಿದೆ. ಅಭಿಯಾನದ ವೇಳೆ ಶಾಲೆ, ದೇವಸ್ಥಾನಗಳಲ್ಲಿ ಹಾಗೂ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಭಗವದ್ಗೀತೆಯ 11ನೇ ಅಧ್ಯಾಯದ ಶ್ಲೋಕಗಳನ್ನು ಹೇಳಿಕೊಡಲಾಗುತ್ತಿದೆ. ವ್ಯಕ್ತಿತ್ವ ವಿಕಸನ, ನೈತಿಕತೆಯ ಪುನರುತ್ಥಾನ, ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರೀಯ ಭಾವೈಕ್ಯ ಸಾಧಿಸುವುದು ಈ ಅಭಿಯಾನದ ಮೂಲ ಉದ್ದೇಶ’ ಎಂದರು.
‘ನ. 30ರಂದು ಶಿವಮೊಗ್ಗದ ಅಲ್ಲಮಪ್ರಭು ಬಯಲಿನಲ್ಲಿ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆ ಸಮಾರಂಭ ನಡೆಯಲಿದೆ’ ಎಂದು ಹೇಳಿದರು.
ವಿಚಾರ ಸಂಕಿರಣ: ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ‘ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ’ ವಿಷಯ ಕುರಿತ ವಿಚಾರ ಸಂಕಿರಣವನ್ನು ನ. 18ರಂದು ಆಯೋಜಿಸಲಾಗಿದೆ. ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್. ಬಿಲ್ಲಪ್ಪ ಉದ್ಘಾಟಿಸುವರು ಎಂದು ಶ್ರೀಗಳು ತಿಳಿಸಿದರು. ಅಭಿಯಾನದ ಗೌರವಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಕಾರ್ಯಾಧ್ಯಕ್ಷ ಅಶೋಕ ಜಿ.ಭಟ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.