
ಶಿವಮೊಗ್ಗ: ರಾಜ್ಯದಲ್ಲಿ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಬಜೆಟ್‌ನಲ್ಲಿ ₹300 ಕೋಟಿ ಮೀಸಲಿರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ ಹೇಳಿದರು.
ನಗರದಲ್ಲಿ ಗುರುವಾರ ಭೋವಿ ಅಭಿವೃದ್ಧಿ ನಿಗಮದ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮುದಾಯದ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವರ್ತನೆ ಸಹಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಸಿದರು.
ಸಮುದಾಯದ ಬಡವರ ಜಮೀನುಗಳಿಗೆ ಸಂಬಂಧಿಸಿದ ಸಮಸ್ಯೆ ಹಲವು ದಶಕಗಳಿಂದ ಇತ್ಯರ್ಥಗಳ್ಳದೇ ಇಂದಿಗೂ ಜೀವಂತವಾಗಿವೆ. ಕೆಲವು ತಾಂತ್ರಿಕ ಸಮಸ್ಯೆಗಳಿರುವುದನ್ನೂ ಸಹ ಗಮನಿಸಲಾಗಿದೆ. ಅವುಗಳ ಶಾಶ್ವತ ಪರಿಹಾರಕ್ಕಾಗಿ ಕಂದಾಯ ಸಚಿವರು ಹಾಗೂ ಸಂಬಂಧಿಸಿದ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಶೀಘ್ರ ಸಮಸ್ಯೆ ಇತ್ಯರ್ಥಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.
ನಿಗಮದ ಸಾಲ-ಸೌಲಭ್ಯ ಯೋಜನೆಯಡಿ ಫಲಾನುಭವಿಗಳಿಗೆ ಬ್ಯಾಂಕ್ ವ್ಯವಸ್ಥಾಪಕರು ಅನಗತ್ಯ ವಿಳಂಬ, ಕಿರಿಕಿರಿ, ಅಲೆದಾಟ ಮಾಡಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ರೀತಿಯ ಧೋರಣೆ ತಿದ್ದಿಕೊಂಡು ಸಕಾಲದಲ್ಲಿ ಸಾಲ ಸೌಲಭ್ಯ ನೀಡುವಂತೆ ಅವರು ಸೂಚಿಸಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಂದ್ರಾನಾಯ್ಕ್ ಮಾತನಾಡಿ, ಭೋವಿ ಅಭಿವೃದ್ಧಿ ನಿಗಮಕ್ಕೆ ಈಗ ದಶಕದ ಸಂಭ್ರಮ. ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಕುರಿ-ಮೇಕೆ ಸಾಕಾಣಿಕೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಹೈನುಗಾರಿಕೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಮುಂತಾದ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಲ್ಲೇಶಪ್ಪ, ಹೆಚ್ಚುವರಿ ಎಸ್ಪಿ ಕಾರಿಯಪ್ಪ ಉಪಸ್ಥಿತರಿದ್ದರು.
ಸರ್ಕಾರದ ಯಾವುದೇ ಯೋಜನೆಯಡಿ ಅರ್ಹರಿಗೆ ಸೌಲಭ್ಯ ವಿತರಿಸಲು ಅನಗತ್ಯ ವಿಳಂಬ ಮಾಡದಂತೆ ಎಲ್ಲಾ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚನೆ ನೀಡುವಂತೆ ಲೀಡ್ ಬ್ಯಾಂಕ್ ಮುಖ್ಯಸ್ಥರು ಸೂಚನೆ ಕೊಡಬೇಕು
–ಎನ್.ಹೇಮಂತ್ ಜಿಲ್ಲಾ ಪಂಚಾಯ್ತಿ ಸಿಇಒ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.