ADVERTISEMENT

ಬಿಜೆಪಿಯನ್ನು ಮತ್ತಷ್ಟು ಬಲಪಡಿಸಲು ಕ್ರಮ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 15:09 IST
Last Updated 17 ಫೆಬ್ರುವರಿ 2021, 15:09 IST
ಶಿವಮೊಗ್ಗದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಬುಧವಾರ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗವಹಿಸಿದ್ದ ಪಕ್ಷದ ಪದಾಧಿಕಾರಿಗಳು.
ಶಿವಮೊಗ್ಗದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಬುಧವಾರ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗವಹಿಸಿದ್ದ ಪಕ್ಷದ ಪದಾಧಿಕಾರಿಗಳು.   

ಶಿವಮೊಗ್ಗ: ಸಾಹಿತ್ಯ, ಸಂಸ್ಕೃತಿ, ಧಾರ್ಮಿಕ, ರಾಜಕೀಯದಲ್ಲಿ ಶಿವಮೊಗ್ಗ ಜಿಲ್ಲೆರಾಷ್ಟ್ರದಲ್ಲೇ ಹೆಸರು ಮಾಡಿದೆ. ವೈವಿಧ್ಯಮಯ ತಾಣವಾದ ಮಲೆನಾಡಿನ ಈ ಜಿಲ್ಲೆಯಲ್ಲಿ ಬಿಜೆಪಿಯನ್ನು ಮತ್ತಷ್ಟು ಸಂಘಟಿತವಾಗಿ ಬೆಳೆಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಬುಧವಾರ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ದೇಶದ ಎಲ್ಲೆಡೆ ಜಯಭೇರಿ ಭಾರಿಸಿದೆ. ಜಗತ್ತು ಬೆರಗಿನಿಂದ ನೋಡುವ ಸಾಧನೆ ಮಾಡುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ಪಕ್ಷ ಸದೃಢವಾಗಿ ಬೆಳೆಯುತ್ತಿದೆ. ಕಾರ್ಯಕರ್ತರು ಸಾಕಷ್ಟು ಕ್ರಿಯಾಶೀಲರಾಗಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ1508 ಬೆಂಬಲಿಗರು ಆಯ್ಕೆಯಾಗಿದ್ದಾರೆ.143 ಗ್ರಾಮಗಳಲ್ಲಿ ಬಿಜೆಪಿ ಬೆಂಬಲಿಗರು ಅಧಿಕಾರ ಹಿಡಿದಿದ್ದಾರೆ. ಅವರ ಗೆಲುವಿನಲ್ಲಿ ಕಾರ್ಯಕರ್ತರ ಪಾತ್ರವಿದೆ ಎಂದು ಶ್ಲಾಘಿಸಿದರು.

ADVERTISEMENT

ಮುಂದಿನ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚು ಸ್ಥಾನ ಗೆಲ್ಲಲು ಕಾರ್ಯಕರ್ತರು ಶ್ರಮಿಸಬೇಕು. ಹೋರಾಟದ ಮೂಲಕ ಬಿಜೆಪಿ ಈ ಹಂತಕ್ಕೆ ಬೆಳೆದಿದೆ. ಮುಂಬರುವ ಚುನಾಣೆಯಲ್ಲಿ ಮೈಮರೆಯದೆ ಕಾರ್ಯ ನಿರ್ವಹಿಸಬೇಕು ಎಂದರು.

ಮಾಚೇನಹಳ್ಳಿ ಕೈಗಾರಿಕಾ ಸಂಘದ ಕಾರ್ಮಿಕರು, ಮಾಲೀಕರು ರಾಮಮಂದಿರ ನಿರ್ಮಾಣಕ್ಕೆ ₹ 70 ಲಕ್ಷ ದೇಣಿಗೆ ನೀಡಿದ್ದಾರೆ. ಪಕ್ಷ, ಜಾತಿ, ಧರ್ಮಭೇದ ಮರೆತು ಸಹಕಾರ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಭಾರತಿ ಶೆಟ್ಟಿ,ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್, ಎಸ್. ದತ್ತಾತ್ರಿ, ಎಸ್.ಎಸ್. ಜ್ಯೋತಿಪ್ರಕಾಶ್, ಪವಿತ್ರರಾಮಯ್ಯ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.