ಸಾಗರ ; ನಗರವ್ಯಾಪ್ತಿಯಲ್ಲಿನ ರಸ್ತೆಗಳ ಹೊಂಡ ಗುಂಡಿಗಳನ್ನು ಮುಚ್ಚುವಂತೆ ಒತ್ತಾಯಿಸಿ ಇಲ್ಲಿನ ಬಿಜೆಪಿ ಕಾರ್ಯಕರ್ತರು ಬುಧವಾರ ಅಂಬೇಡ್ಕರ್ ವೃತ್ತದಲ್ಲಿ ಒಂದು ಗಂಟೆ ಕಾಲ ರಸ್ತೆ ತಡೆ ಚಳವಳಿ ನಡೆಸಿದರು.
ಗ್ಯಾರೆಂಟಿ ಯೋಜನೆಗಳ ಕಾರಣಕ್ಕೆ ಯಾವುದೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ರಸ್ತೆಯಲ್ಲಿನ ಹೊಂಡ ಗುಂಡಿಗಳನ್ನು ಮುಚ್ಚಲು ಸಹ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂಬುದೆ ಈ ಮಾತಿಗೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಮುಖಂಡ ಟಿ.ಡಿ.ಮೇಘರಾಜ್ ದೂರಿದರು.
ರಾಜ್ಯದ ಎಲ್ಲೆಡೆ ರಸ್ತೆಗಳು ದುಸ್ಥಿತಿಗೆ ತಲುಪಿವೆ. ಜನರು ಈ ಬಗ್ಗೆ ಪ್ರಶ್ನಿಸಿದರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿ ಮೋದಿ ನಿವಾಸದ ರಸ್ತೆಗಳ ಸರಿ ಇದೆಯೆ ಎಂದು ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದವಾಗಿದೆ. ಇಲ್ಲಿನ ಶಾಸಕ ಗೋಪಾಲಕೃಷ್ಣ ಬೇಳೂರು ಜನರಿಗೆ ಮೂಲ ಸೌಕರ್ಯ ಕಲ್ಪಿಸುವ ಬದಲು ದೊಡ್ಡ ಮೊತ್ತದ ಕಮೀಷನ್ ಆಸೆಗೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಹಿಂದೆ ಬಿದ್ದಿದ್ದಾರೆ ಎಂದು ಆರೋಪಿಸಿದರು.
ನಗರದಲ್ಲಿ ಅಭಿವೃದ್ಧಿ ಕಾರ್ಯಗಳು ಶಾಸಕರು ಹಾಗೂ ಅವರ ಬೆಂಬಲಿಗರು ಅಳವಡಿಸುತ್ತಿರುವ ಫ್ಲೆಕ್ಸ್ ಗಳಿಗೆ ಸೀಮಿತವಾಗಿದೆ. ರಾಜ್ಯ ಸರ್ಕಾರದಿಂದ ಅನುದಾನ ತರುವಲ್ಲಿ ವಿಫಲವಾಗಿರುವ ಶಾಸಕರು ಸುಳ್ಳು ಅಂಕಿ ಅಂಶಗಳನ್ನು ನೀಡುತ್ತ ಜನರನ್ನು ಹಾದಿ ತಪ್ಪಿಸುತ್ತಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್ ಟೀಕಿಸಿದರು.
ಬಿಜೆಪಿ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ದೇವೇಂದ್ರಪ್ಪ ಯಲಕುಂದ್ಲಿ, ಮಧುರಾ ಶಿವಾನಂದ್ ಮಾತನಾಡಿದರು. ಪ್ರಮುಖರಾದ ಮೈತ್ರಿ ಪಾಟೀಲ್, ರಮೇಶ್ ಹಾರೆಗೊಪ್ಪ, ಸವಿತಾ ವಾಸು, ಸತೀಶ್ ಕೆ. ವಿನೋದ್ ರಾಜ್, ಕೃಷ್ಣ ಶೇಟ್, ಮಂಜಯ್ಯ ಜೈನ್, ಸಂತೋಷ್ ರಾಯಲ್, ರವೀಂದ್ರ ಬಿ.ಟಿ. ಗಿರೀಶ್ ಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.