ADVERTISEMENT

ಸರ್ಕಾರದಿಂದ ಪ್ರಜಾಪ್ರಭುತ್ವ ವ್ಯವಸ್ಥೆಯ ಕಗ್ಗೊಲೆ: ಶಾಸಕ ಚನ್ನಬಸಪ್ಪ ಆಕ್ರೋಶ

ಕಾಂಗ್ರೆಸ್ ವಿರುದ್ಧದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2025, 16:17 IST
Last Updated 25 ಜೂನ್ 2025, 16:17 IST
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಬಿ.ಅಶೋಕ ನಾಯ್ಕ ಮಾತನಾಡಿದರು
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ನಡೆದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಬಿ.ಅಶೋಕ ನಾಯ್ಕ ಮಾತನಾಡಿದರು   

ಶಿವಮೊಗ್ಗ: ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನಗರ ಹಾಗೂ ಗ್ರಾಮಾಂತರ ಘಟಕದಿಂದ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.

ವಸತಿ ಹಗರಣ ಹಾಗೂ ಮುಸ್ಲಿಮರಿಗೆ ಮಿತಿಮೀರಿದ ಮೀಸಲಾತಿ ಕೊಡುತ್ತಿರುವ ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಮುಸ್ಲಿಮರ ತುಷ್ಟೀಕರಣವೊಂದೇ ಕಾಂಗ್ರೆಸ್‌ಗೆ ಆಡಳಿತ ನಡೆಸುವ ಮಾನದಂಡವಾಗಿದೆ ಎಂದು ದೂರಿದರು.

ADVERTISEMENT

ಬಿಜೆಪಿ ಆಡಳಿತದಲ್ಲಿ ಭಾಗ್ಯಲಕ್ಷ್ಮೀ ಬಾಂಡ್, ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಲಾಗಿತ್ತು. ಈ ಯೋಜನೆ ಕೇವಲ ಹಿಂದೂಗಳಿಗೆ ಮಾತ್ರ ಸೀಮಿತಗೊಳಿಸಿರಲಿಲ್ಲ. ಎಲ್ಲಾ ಧರ್ಮ, ಜಾತಿಯವರಿಗೂ ನೀಡಲಾಗಿತ್ತು. ಆದರೆ, ಕಾಂಗ್ರೆಸ್ ಇದಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿದೆ. ಬಿಜೆಪಿಯಿಂದ ಕೂಲಿ ಕಾರ್ಮಿಕರ, ರೈತರ ಹಾಗೂ ಬಡವರ ಹಿತ ಕಾಯಲಾಗುತ್ತಿದೆ ಎಂದರು.

‘ಕಾಂಗ್ರೆಸ್ ಸರ್ಕಾರದ ಆಡಳಿದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆಯೇ? ಎಂದು ಪ್ರಶ್ನಿಸಬೇಕಾಗುತ್ತದೆ. ಭ್ರಷ್ಟಾಚಾರ ಮಾಡಿರುವ ಅಧಿಕಾರಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುವುದನ್ನು ಬಿಟ್ಟು ರಕ್ಷಣೆ ನೀಡಲಾಗುತ್ತಿದೆ’ ಎಂದು ದೂರಿದರು.

ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಎನ್.ಕೆ. ಜಗದೀಶ್, ಮಾಜಿ ಶಾಸಕರಾದ ಕೆ.ಬಿ. ಅಶೋಕ್‌ ನಾಯ್ಕ, ಕೆ.ಜಿ. ಕುಮಾರಸ್ವಾಮಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಮೋಹನ್‌ ರೆಡ್ಡಿ, ಪ್ರಮುಖರಾದ ಎಸ್. ಜ್ಞಾನೇಶ್ವರ್, ಸುನೀತಾ ಅಣ್ಣಪ್ಪ, ರಮೇಶ್, ನಾಗರಾಜ್, ಶಂಕರ್‌ಗನ್ನಿ, ಸುರೇಖಾ ಮುರಳೀಧರ್, ಎಂ.ಬಿ. ಹರಿಕೃಷ್ಣ, ಶಿವಕುಮಾರ್, ಪ್ರಭು, ರಾಹುಲ್‌ ಬಿದಿರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.