ADVERTISEMENT

ಸಾಗರ | ಗಾಂಜಾ, ಇಸ್ಪೀಟ್, ಮಟ್ಕಾ ದಂಧೆ ತಡೆಯಲು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 2:45 IST
Last Updated 21 ಜನವರಿ 2026, 2:45 IST
ಸಾಗರದಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು
ಸಾಗರದಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು   

ಸಾಗರ: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಾಂಜಾ, ಅಕ್ರಮ ಮದ್ಯ ಮಾರಾಟ ತಡೆಯಬೇಕು, ಸಮರ್ಪಕವಾಗಿ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿ ನಗರ ಪೊಲೀಸ್ ಠಾಣೆ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿದರು.

ಈ ಭಾಗದಲ್ಲಿ ಗಾಂಜಾ ಮಾರಾಟ ಮಾಡುವ ಅಕ್ರಮ ದಂಧೆ ವ್ಯಾಪಕವಾಗಿದೆ. ಗಾಂಜಾ ಎಲ್ಲಿಂದ ಬರುತ್ತಿದೆ, ಯಾರಿಗೆ ಸರಬರಾಜು ಮಾಡಲಾಗುತ್ತಿದೆ ಎಂಬುದು ಪೊಲೀಸರಿಗೆ ಗೊತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ. ಅನೇಕ ಅಪರಾಧ ಪ್ರಕರಣಗಳಿಗೆ ಗಾಂಜಾ ಸೇವನೆಯೇ ಕಾರಣವಾಗುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹಾಲಪ್ಪ ಹರತಾಳು ದೂರಿದರು.

ಸಾಗರ-ಹೊಸನಗರ ಭಾಗದ ಗ್ರಾಮಾಂತರ ಪ್ರದೇಶಗಳ ದಿನಸಿ ಅಂಗಡಿಗಳಲ್ಲೂ ಮದ್ಯ ಮಾರಾಟವಾಗುತ್ತಿದೆ. ಇದರಿಂದಾಗಿ ಗ್ರಾಮೀಣ ಭಾಗದ ಜನರ ನೆಮ್ಮದಿಗೆ ಭಂಗ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ವಿದ್ಯುತ್ ಸರಬರಾಜು ಮಾಡಲು ಯಾವುದೇ ತೊಂದರೆ ಇಲ್ಲ ಎಂದು ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ಆದರೆ ಸ್ಥಳೀಯವಾಗಿ ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದೆ ರೈತರು ತೊಂದರೆಗೆ ಸಿಲುಕಿದ್ದಾರೆ ಎಂದು ದೂರಿದರು.

ತಾಲ್ಲೂಕಿನಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮಂಜೂರು ಮಾಡಿದ ಯೋಜನೆಗಳನ್ನು ಈಗ ಕಾರ್ಯಗತಗೊಳಿಸಿ ತಾವೇ ಅನುದಾನ ತಂದಿದ್ದು ಎಂದು ಈಗಿನ ಶಾಸಕರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಉದ್ಯೋಗಖಾತ್ರಿ ಯೋಜನೆಗೆ ರಾಮನ ಹೆಸರು ಇಟ್ಟಿರುವುದು ಕಾಂಗ್ರೆಸ್ ಮುಖಂಡರ ನಿದ್ದೆಗೆಡಿಸಿದೆ. ಅನಗತ್ಯವಾಗಿ ಈ ವಿಷಯದಲ್ಲಿ ರಾಜ್ಯದ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸುವ ಮೂಲಕ ಜನರನ್ನು ಹಾದಿ ತಪ್ಪಿಸಲು ಮುಂದಾಗಿದ್ದಾರೆ ಎಂದು ಶಿವಮೊಗ್ಗ ಕ್ಷೇತ್ರದ ಶಾಸಕ ಚನ್ನಬಸಪ್ಪ ದೂರಿದರು.

ಬಿಜೆಪಿಯ ಪ್ರಮುಖರಾದ ಟಿ.ಡಿ.ಮೇಘರಾಜ್, ಕೆ.ಆರ್.ಗಣೇಶ್ ಪ್ರಸಾದ್, ಮಲ್ಲಿಕಾರ್ಜುನ ಹಕ್ರೆ, ರತ್ನಾಕರ ಹೊನಗೋಡು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಜಗದೀಶ್, ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಮಧುರಾ ಶಿವಾನಂದ್, ಮೈತ್ರಿ ಪಾಟೀಲ್, ಪ್ರಸನ್ನ ಕೆರೆಕೈ, ದೇವೇಂದ್ರಪ್ಪ, ವಿ.ಮಹೇಶ್, ಸತೀಶ್ ಕೆ. ಸಂತೋಷ್ ಶೇಟ್, ಆರ್.ಶ್ರೀನಿವಾಸ್, ಬಿ.ಎಚ್.ಲಿಂಗರಾಜ್, ಭೈರಪ್ಪ, ಪ್ರೇಮಾ ಕಿರಣ್ ಸಿಂಗ್, ಅರುಣ ಕುಗ್ವೆ, ಪ್ರಶಾಂತ್ ಕೆ.ಎಸ್., ಹರೀಶ್ ಮೂಡಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.