ADVERTISEMENT

ಕರ್ನಾಟಕದಲ್ಲೂ ಬಿಜೆಪಿ ಗೆಲುವು ನಿಶ್ಷಿತ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 5:30 IST
Last Updated 7 ಡಿಸೆಂಬರ್ 2022, 5:30 IST

ಶಿವಮೊಗ್ಗ: ದೇಶದಲ್ಲಿ ಯಾವುದೇ ಚುನಾವಣೆ ನಡೆದರೂ ಬಿಜೆಪಿಯೇ ಗೆಲ್ಲುವುದು ನಿಶ್ಚಿತ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಜಯಭೇರಿ ಬಾರಿಸುವುದಲ್ಲದೇ, ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.

‘ಕರ್ನಾಟಕದಲ್ಲಿ ಕಾಂಗ್ರೆಸ್ ಎಲ್ಲಿದೆ? ಕಾಂಗ್ರೆಸ್‌ನ ಇಬ್ಬರು ನಾಯಕರು ಪೈಲ್ವಾನರಂತೆ ಬಡಿದಾಡುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಇನ್ನೂ ಕ್ಷೇತ್ರ ಯಾವುದೆಂದು ಗೊತ್ತಿಲ್ಲ. 224 ಕ್ಷೇತ್ರವೂ ನನ್ನದೇ ಎಂದು ಹೇಳುತ್ತಾರೆ. ಹಾಗಾದರೆ ಬಾದಾಮಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಯಾಕೆ ನಿಲ್ಲುತ್ತಿಲ್ಲ’ ಎಂದು ನಗರದಲ್ಲಿ ಮಂಗಳವಾರ ಸುದ್ಧಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ ಅವರು ಪ್ರಶ್ನಿಸಿದರು.

ಜನಾರ್ದನ ರೆಡ್ಡಿ ರಾಜಕೀಯ ಪ್ರವೇಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಸ್ವತಂತ್ರರು. ಅವರು ಹೊಸ ಪಕ್ಷ ಕಟ್ಟುತ್ತಾರೋ ಬಿಡುತ್ತಾರೋ ಗೊತ್ತಿಲ್ಲ. ಗಂಗಾವತಿಯಲ್ಲಿ ಬಿಜೆಪಿಯಿಂದಲೇ ಸ್ಪರ್ಧಿಸುವ ಬಗ್ಗೆ ಮಾತುಕತೆ ನಡೆದಿದೆ ಎಂದು ಮಾಧ್ಯಮಗಳು ಹೇಳುತ್ತಿವೆ. ಅದರ ಬಗ್ಗೆ ನನಗೆ ಗೊತ್ತಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.